ಈಗಿನ ಸುದ್ದಿ

49 ಗಣಿ ಪರವಾನಗಿ ರದ್ದುಗೊಳಿಸಿದ 'ಸುಪ್ರೀಂ'

49 ಗಣಿ ಪರವಾನಗಿ ರದ್ದುಗೊಳಿಸಿದ 'ಸುಪ್ರೀಂ'
Published On :

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ 3 ಜಿಲ್ಲೆಗಳ 49 ಗಣಿ ಪರವಾನಗಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದ 'ಸಿ' ವರ್ಗದ ಸುಮಾರು 49 ಗಣಿ ಪರವಾನಗಿಳನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಗಣಿಗಾರಿಕೆಗೆ ಬಳಸುತ್ತಿರುವ ವಾಹನಗಳನ್ನು, ಜೆಸಿಬಿ ಮತ್ತು ಟಿಪ್ಪರ್ ಗಳನ್ನು ಮತ್ತು ಕಬ್ಬಿಣದ ಅದಿರನ್ನು ಮುಟ್ಟುಗೋಲು ಹಾಕಿಕೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದೆ.

ಪ್ರರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಅಫ್ತಾಬ್ ಆಲಂ ಅವರು, ಅಕ್ರಮ ಗಣಿಗಾರಿಕೆಯಿಂದ ಸುತ್ತಮುತ್ತಲಿನ ಪ್ರದೇಶದ ಪರಿಸರ ಹಾಳಾಗಿದ್ದು, ಅಲ್ಲಿನ ನೈಸರ್ಗಿಕ ವಾತಾವರಣದಲ್ಲಿ ಸುಧಾರಣಾ ಕಾರ್ಯಗಳನ್ನು ಕೈಗೊಳ್ಳುವ ಅವಶ್ಯಕತೆ ಇದ್ದು, ಅಲ್ಲಿನ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಅಲ್ಲದೆ ಕರ್ನಾಟಕ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಗಡಿ ಗುರುತು ನಾಶ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಗಣಿಗಾರಿಕೆ ಪರವಾನಗಿಗಳನ್ನು ರದ್ದುಗೊಳಿಸಬೇಕಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಂತೆಯೇ ಹೊಸದಾಗಿ ಗಣಿಗಾರಿಕೆ ಪರವಾನಗಿಗಳನ್ನು ನೀಡುವ ಪ್ರಸ್ತಾವವನ್ನು ನ್ಯಾಯಾಲಯ ತಳ್ಳಿಹಾಕಿದೆ. ಅಕ್ರಮ ಗಣಿಗಾರಿಕೆ ಬಗ್ಗೆ 2011 ರಿಂದ 2013ರ ಫೆಬ್ರವರಿಯವರೆಗೆ ತನಿಖೆ ನಡೆಸಿದ್ದ ಕೇಂದ್ರೀಯ ಉನ್ನತಾಧಿಕಾರ ಸಮಿತಿ(ಸಿಇಸಿ) ಗಣಿಗಾರಿಕೆಯನ್ನು ಮೂರು ವಿಭಾಗಗಳಲ್ಲಿ ವರ್ಗೀಕರಿಸಿತ್ತು.

ಅಲ್ಲದೆ ತನ್ನ ವಿವಿಧ ಹಂತದ ತನಿಖಾ ವರದಿಗಳನ್ನು ನ್ಯಾಯಾಲಯಕ್ಕೆ ನೀಡಿದ್ದ ಸಿಇಸಿ ಸಮಿತಿಯು, ಗಣಿಗಾರಿಕೆ ಪ್ರದೇಶಗಳ ಸುಧಾರಣೆಗಾಗಿ ಮತ್ತು ಅಲ್ಲಿನ ಕಾರ್ಮಿಕರ ಪುನರ್ವಸತಿಗಾಗಿ ಹಲವು ಶಿಫಾರಸ್ಸುಗಳನ್ನು ಜಾರಿಮಾಡುವಂತೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.