ಹುಬ್ಬಳ್ಳಿಯಲ್ಲಿ ಪ್ರಧಾನಿ ಪ್ರಚಾರ, 'ಕೈ' ನಿಂದ ಮಾತ್ರ ಅಭಿವೃದ್ಧಿ ಎಂದರು ಸಿಂಗ್

ಹುಬ್ಬಳ್ಳಿ: ಕಾಂಗ್ರೆಸ್ನಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಹೀಗಾಗಿ ರಾಜ್ಯದ ಅಭಿವೃದ್ಧಿಗಾಗಿ 'ಕೈ'ಗೆ ಮತ ನೀಡುವಂತೆ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು ಸೋಮವಾರ ಮತದಾರರಲ್ಲಿ ಮನವಿ ಮಾಡಿದರು.
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಚುನಾವಣೆಯ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕಕ್ಕೆ ವಿಶೇಷ ಸ್ಥಾನವಿದೆ. ಹಿರಿಯ ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ, ಧರಂ ಸಿಂಗ್, ಎಸ್.ಎಂ ಕೃಷ್ಣ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ನಾಯಕರು ರಾಜ್ಯದ ಅಭಿವೃದ್ಧಿಗೆ ಕಾಣಿಕೆ ನೀಡಿದ್ದಾರೆ. ಕಾಂಗ್ರೆಸ್ ಸಿಎಂಗಳ ಅವಧಿಯಲ್ಲಿ ಕರ್ನಾಟಕ, ಬೆಂಗಳೂರು ವಿಶ್ವಖ್ಯಾತಿಯಾಗಿತ್ತು ಎಂದರು.
ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಸಿಂಗ್, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಈಗ ಕರ್ನಾಟಕ ದೇಶದೆಲ್ಲೆಡೆ ಚರ್ಚೆಗೊಳಗಾಗುತ್ತಿದೆ. ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯದ ಹಲವು ಮಂತ್ರಿಗಳನ್ನು ಸಂಪುಟದಿಂದ ಉಚ್ಚಾಟಿಸಲಾಗಿದೆ ಎಂದರು.
ಕರ್ನಾಟಕದ ಜನ ವಿದ್ಯುತ್ ಹಾಗೂ ನೀರಿನ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಜನತೆಗೆ ನೀರು ಹಾಗೂ ವಿದ್ಯುತ್ ಪೂರೈಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಬಿಜೆಪಿಯಿಂದ ಉದ್ಯೋಗ ಸೃಷ್ಟಿಯಾಗಿಲ್ಲ. ಹೀಗಾಗಿ ಸಣ್ಣಪುಟ್ಟ ರೈತರು ಕೆಲಸಕ್ಕಾಗಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಅಲ್ಲದೆ ಕೇಂದ್ರ ನೀಡಿದ ಹಣಕಾಸಿನ ನೆರವನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಸಿಕೊಂಡಿಲ್ಲ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಹಲವು ಬೃಹತ್ ಯೋಜನೆಗಳು ಅಪೂರ್ಣವಾಗಿ ಉಳಿದಿವೆ ಎಂದು ಪ್ರಧಾನಿ ಹೇಳಿದರು.
ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಬಡ ಜನರಿಗೆ ಉದ್ಯೋಗ ಸಿಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತಷ್ಟು ಉದ್ಯೋಗ ಸೃಷ್ಟಿ, ಕೃಷಿ ಅಭಿವೃದ್ಧಿ, ಹುಬ್ಬಳ್ಳಿ-ಧಾರವಾಡಕ್ಕೆ ಎಲ್ಪಿಜಿ ಪೈಪ್ಲೈನ್ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಕ್ಕೆ ವಿಶೇಷ ಒತ್ತು ನೀಡಲಾಗುವುದು ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವುದಾಗಿ ಸಿಂಗ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


