ಈಗಿನ ಸುದ್ದಿ

ಜಗನ್‌ಗೇಕೆ ಜಾಮೀನು ದೊರೆಯುತ್ತಿಲ್ಲ: ಸುಪ್ರೀಂ ಪ್ರಶ್ನೆ

ಜಗನ್‌ಗೇಕೆ ಜಾಮೀನು ದೊರೆಯುತ್ತಿಲ್ಲ: ಸುಪ್ರೀಂ ಪ್ರಶ್ನೆ
Published On :

ನವದೆಹಲಿ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಬಂಧನದಲ್ಲಿರುವ ಜಗನ್‌ಮೋಹನ್ ರೆಡ್ಡಿ ಅವರಿಗೇಕೆ ಜಾಮೀನು ದೊರೆಯುತ್ತಿಲ್ಲ ಎಂದು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ಈ ಬಗ್ಗೆವಿವರ ನೀಡುವಂತೆ ಸಿಬಿಐಗೆ ಸೂಚಿಸಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಸಂಸದ ಜಗನ್‌ಮೋಹನ್ ರೆಡ್ಡಿ ಅವರಿಗೆ ಕಳೆದ ಒಂದು ವರ್ಷದಿಂದ ಜಾಮೀನು ಸಿಕ್ಕಿಲ್ಲ. ಸತತ 12 ತಿಂಗಳುಗಳಿಂದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಈ ವರೆಗೂ ಅವರಿಗೆ ಜಾಮೀನು ಮಂಜೂರಾಗಿಲ್ಲವೇಕೆ ಎಂದು ಸುಪ್ರೀಂಕೋರ್ಟ್ ಸಿಬಿಐ ಸಂಸ್ಥೆಯನ್ನು ಪ್ರಶ್ನಿಸಿದ್ದು, ಈ ಬಗ್ಗೆ ಮೇ 6ರೊಳಗೆ ವರದಿ ನೀಡುವಂತೆ ಆದೇಶಿಸಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿ.ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರರಾಗಿರುವ ಜಗನ್ ಮೋಹನ್ ರೆಡ್ಡಿ ಅವರು, ತಮ್ಮ ತಂದೆಯ ಪ್ರಭಾವವನ್ನು ಬಳಸಿಕೊಂಡು ಸರ್ಕಾರದ ವಿವಿಧ ಯೋಜನೆಗಳಲ್ಲಿ ತಮ್ಮ ಮಾಲೀಕತ್ವವಿರುವ ಸಂಸ್ಥೆಗಳಿಗೆ ಲಾಭ ಮಾಡಿಕೊಂಡರು ಎಂಬ ಆರೋಪಗಳಿವೆ. ವೈಎಸ್‌ಆರ್ ನಿಧನ ನಂತರ ಜಗನ್ ಅಕ್ರಮ ಆಸ್ತಿ ಪ್ರಕರಣ ಬೆಳಕಿಗೆ ಬಂದಿದ್ದು, ಜಗನ್ ಬಂಧನದ ಹಿಂದೆ ಕಾಂಗ್ರೆಸ್ ಹಿರಿಯ ನಾಯಕರು ಮತ್ತು ದೆಹಲಿಯ ಕೆಲ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇತ್ತೀಚೆಗೆ ಆಂಧ್ರದ ಸಚಿವರೊಬ್ಬರು ಜಗನ್ ಕಾಂಗ್ರೆಸ್ ತೊರೆದಕ್ಕಾಗಿಯೇ ಅವರು ಜೈಲುಪಾಲಾಗಿದ್ದು, ಅವರು ಮತ್ತೆ ಕಾಂಗ್ರೆಸ್‌ಗೆ ಮರಳುವುದಾದರೆ ಅವರು ಜೈಲು ಶಿಕ್ಷೆಯಿಂದ ಮುಕ್ತರಾಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಸಚಿವರ ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ಜಗನ್ ಪರ ವಕೀಲರು ಇದನ್ನೇ ಸಾಕ್ಷಿಯಾಗಿ ಪರಿಗಣಿಸಿ ತಮ್ಮ ಕಕ್ಷೀದಾರರಿಗೆ ಜಾಮೀನು ನೀಡಬೇಕು ಮತ್ತು ಪ್ರಕರಣವನ್ನು ರಾಜಕೀಯ ದುರುದ್ದೇಶಪೂರಿತ ಎಂದು ಭಾವಿಸಿ ಜಗನ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

2009ರಲ್ಲಿ ಆಂಧ್ರ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರು ಹೆಲಿಕಾಪ್ಟರ್ ದುರಂತದಲ್ಲಿ ಮರಣವನ್ನಪ್ಪಿದ ನಂತರ ಅವರ ಪುತ್ರ ಜಗನ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. 2011ರಲ್ಲಿ ಆಂಧ್ರ ಸರ್ಕಾರ ಜಗನ್ ಅಕ್ರಮ ಆಸ್ತಿ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.