ಈಗಿನ ಸುದ್ದಿ

ಉಪ ಸಮರ: ಬಿಜೆಪಿ-ಜೆಡಿಎಸ್ ಮೈತ್ರಿ, 2 ಕ್ಷೇತ್ರದಲ್ಲೂ ನಾಮಪತ್ರ ವಾಪಸ್

ಉಪ ಸಮರ: ಬಿಜೆಪಿ-ಜೆಡಿಎಸ್ ಮೈತ್ರಿ, 2 ಕ್ಷೇತ್ರದಲ್ಲೂ ನಾಮಪತ್ರ ವಾಪಸ್
Published On :

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಎರಡೂ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.

ನಾಮಪತ್ರ ಹಿಂಪಡೆಯುವುದಕ್ಕೆ ಕಡೆಯ ದಿನವಾದ ಇಂದು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಂ.ಕೃಷ್ಣಪ್ಪ ಹಾಗೂ ಮಂಡ್ಯ ಬಿಜೆಪಿ ಅಭ್ಯರ್ಥಿ ದೊರೆಸ್ವಾಮಿ ಇಬ್ಬರೂ ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು, ಲೋಕಸಭೆ ಚುನಾವಣೆಗೆ ಇನ್ನು ಕೇವಲ 6 ತಿಂಗಳ ಅವಧಿ ಇರುವುದರಿಂದ ಮತ್ತು ಕಾಂಗ್ರೆಸ್ಗೆ ಅನುಕೂಲವಾಗಬಾರದು ಎಂಬ ಉದ್ದೇಶದಿಂದ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ವಾಪಸ್ ಪಡೆಯಲು ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ರಾಜ್ಯ ಘಟಕಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ರಾಜನಾಥ್ ಸಿಂಗ್ ಸೂಚನೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲಾಗಿದೆ ಮತ್ತು ಈ ಬಗ್ಗೆ ತಾವು ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದು, ವಿಧಾನ ಪರಿಷತ್ ಚುನಾವಣೆಯತ್ತ ಗಮನ ಹರಿಸುವಂತೆ ಸೂಚಿಸಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.

ಲೋಕಸಭೆ ಮತ್ತು ವಿಧಾನ ಪರಿಷತ್ ಮರು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ರಣತಂತ್ರ ರೂಪಿಸುತ್ತಿವೆ. ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ತೀರಾ ಹತ್ತಿರವಾದರು. ಉಭಯ ಪಕ್ಷಗಳು ಗೌಪ್ಯ ಸಭೆ, ಸಮಾಲೋಚನೆಯ ಮೂಲಕ ಮೈತ್ರಿ ಮಾಡಿಕೊಳ್ಳುವಲ್ಲಿ ಕಡೆಗೂ ಯಶಸ್ವಿಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.