ಪಾಕ್ ಜೊತೆ ಮಾತುಕತೆ ಬಗ್ಗೆ ಪ್ರಧಾನಿ ನಿರ್ಧಾರ: ಖುರ್ಷಿದ್
ನವದೆಹಲಿ: ಮುಂದಿನ ತಿಂಗಳು ಪಾಕಿಸ್ತಾನದ ಜೊತೆ ನಡೆಸಲು ಉದ್ದೇಶಿಸಿರುವ ದ್ವಿಪಕ್ಷೀಯ ಮಾತುಕತೆ ಕುರಿತು ಪ್ರಧಾನಿ ಮನಮೋಹನ್ ಸಿಂಗ್ ಅವರು ಅಂತಿಮ ನಿರ್ಧಾರ ಕೈಗೊಳ್ಳಲ್ಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಭಾರತೀಯ ಯೋಧರ ಮೇಲೆ ಪಾಕ್ ಸೈನಿಕರು ನಡೆಸಿರುವ ದಾಳಿಯ ಹಿನ್ನಲೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಬಾರದು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ಅಲ್ಲದೆ ಘಟನೆಯ ಕುರಿತು ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಕಿಡಿಕಾರಿದ್ದವು. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಆಯೋಜನೆಗೊಂಡಿದ್ದ ಉಭಯ ದೇಶಗಳ ಪ್ರಧಾನಿಗಳ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಆದರೆ ಯುಪಿಎ ಮೂಲಗಳ ಪ್ರಕಾರ ಉಭಯ ದೇಶಗಳ ಪ್ರಧಾನಿಗಳ ಉದ್ದೇಶಿತ ಮಾತುಕತೆ ನಿಗದಿತ ವೇಳೆಯಲ್ಲಿಯೇ ನಡೆಯಲಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಪೂರಕವೆಂಬಂತೆ ಯುಪಿಎ ವಕ್ತಾರ ಪಿಸಿ ಚಾಕೋ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ದಾಳಿಗೆ ಪ್ರತಿ ದಾಳಿ ಅಥವಾ ಯುದ್ಧದಿಂದಾಗಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿಲ್ಲ. ಕೇವಲ ದ್ವಿಪಕ್ಷೀಯ ಮಾತುಕತೆಯಿಂದ ಮಾತ್ರ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಮಾತುಕತೆಯಿಂದ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಚಾಕೋ ಹೇಳಿದ್ದಾರೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನ್ಯೂಯಾರ್ಕ್ ಪ್ರವಾಸ ಕೈಗೊಂಡಿದ್ದು, ಅಲ್ಲಿ ಅವರು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ನಡುವೆ ಪಾಕ್ ಸೈನಿಕರ ದುಷ್ಕೃತ್ಯದ ವಿರುದ್ಧ ಕಟುವಾಗಿ ಟೀಕಿಸಿರುವ ಕೇಂದ್ರಸರ್ಕಾರ ಪಾಕಿಸ್ತಾನ ರಾಯಭಾರ ಕಚೇರಿಗೆ ಸಮನ್ಸ್ ಜಾರಿ ಮಾಡಿದೆ. ಅಲ್ಲದೆ ಘಟನೆ ಕುರಿತು ವಿವರ ನೀಡುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

