ಗುಂಪು ಘರ್ಷಣೆ: ಜಮ್ಮುನಲ್ಲಿ ಕರ್ಫ್ಯೂ ಜಾರಿ
ಶ್ರೀನಗರ: ಜಮ್ಮುವಿನ ಕಿಶ್ತ್ವಾರ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ವಿಕೋಪಕ್ಕೆ ತಿರುಗಿದ್ದು, ಕಿಶ್ತ್ವಾರ್ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ರಂಜಾನ್ ಪ್ರಯುಕ್ತ ಕಿಶ್ತ್ವಾರ್ ಜಿಲ್ಲೆಯ ಖುಲೀದ್ ಪ್ರಾಂತ್ಯದಲ್ಲಿ ನಡೆದ ಪವಿತ್ರ ಪ್ರಾರ್ಥನೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಕಲ್ಲು ತೂರಾಟದಲ್ಲಿ ತೊಡಗಿದ್ದಾರೆ. ಈ ವೇಳೆ ಸುಮಾರು 10ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಯುವಕರು ಪರಸ್ಪರ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸುಮಾರು 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ಸ್ಥಳಕ್ಕಾಗಮಿಸಿದ್ದು, ಘರ್ಷಣೆಯಲ್ಲಿ ತೊಡಗಿರುವವರ ಮೇಲೆ ಆಶ್ರುವಾಯು ಸಿಡಿಸಿದ್ದಾರೆ. ಆದರೆ ಯೋಧರ ಆಗಮನವಾಗುತ್ತಿದ್ದಂತೆಯೇ ಅವರತ್ತ ಕೂಡ ಗುಂಡಿನ ದಾಳಿ ನಡೆಸುತ್ತಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಈ ವೇಳೆ ಘರ್ಷಣೆಯಲ್ಲಿ ಸಿಆರ್ಪಿಎಫ್ ಯೋಧ ರೋಹಿತ್ ಕುಮಾರ್ ಎಂಬುವವರ ಹೊಟ್ಟೆಗೆ ಗುಂಡೇಟು ಬಿದ್ದಿದ್ದು, ಅವರನ್ನು ಸ್ಥಳೀಯ ಸೈನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ರಂಜಾನ್ ಪ್ರಯುಕ್ತ ಕಿಶ್ತ್ವಾರ್ನ ಖುಲೀದ್ ಪ್ರಾಂತ್ಯದ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯ ನಂತರ, ಗುಂಪೊಂದು ದೇಶ ವಿರೋಧಿ ಘೋಷಣೆಗಳನ್ನು ಕೂಗುತ್ತಿತ್ತು. ಈ ವೇಳೆ ಇದನ್ನು ತಡೆಯಲು ಬಂದ ಮತ್ತೊಂದು ಗುಂಪಿನ ಯುವಕರೊಂದಿಗೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪರಸ್ಪರ ಕಲ್ಲು ತೂರಾಟ ನಡೆಸಿದ ಯುವಕರ ತಂಡ ನಂತರ ಗುಂಡಿನ ದಾಳಿ ನಡೆಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಘಟನೆ ಕುರಿತು ಮಾಧ್ಯಮಗಳಲ್ಲಿ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ಶಾಂತಿ ಕಾಪಾಡುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಘಟನಾ ಸ್ಥಳದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಮ್ಮು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಪ್ರಸಾದ್ ಅವರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

