ಈಗಿನ ಸುದ್ದಿ

ಉಪ ಸಮರ: 'ಕೈ' ಶಾಸಕರಿಗೆ ಪ್ರಚಾರದ ಉಸ್ತುವಾರಿ

Published On :

ಬೆಂಗಳೂರು: ಲೋಕಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪಕ್ಷದ ಸಭೆ ಮುಕ್ತಾಯಗೊಂಡಿದ್ದು, ಕೈ ಬಳಗದ ಎಲ್ಲ ಶಾಸಕರಿಗೂ ಕಾಂಗ್ರೆಸ್ ನಾಯಕರು ಪ್ರಚಾರದ ಉಸ್ತುವಾರಿ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲುಸ್ತುವಾರಿಯನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ವಹಿಸಲಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಚಾರದ ಮೇಲುಸ್ತುವಾರಿಯನ್ನು ಮಹದೇವಪ್ಪ ಅವರಿಗೆ ನೀಡಲಾಗಿದೆ.

ನಿನ್ನೆ ನಡೆದ ಸಭೆಯಲ್ಲಿ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು, ಕಾಂಗ್ರೆಸ್ ಎಲ್ಲ 122 ಶಾಸಕರಿಗೂ ಉಸ್ತುವಾರಿ ನೀಡಲಾಗುತ್ತದೆ ಎಂದು ಹೇಳಿದ್ದರು. ಅದರಂತೆ ಕಾಂಗ್ರೆಸ್ನ ಎಲ್ಲ ಶಾಸಕರಿಗೂ ಜವಾಬ್ದಾರಿ ನೀಡಲಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಶಾಸಕರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಡಿಕೆಶಿ-ಬಿಎಸ್ವೈ ಭೇಟಿ

ಈ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿರುವ ತಮ್ಮ ಸೋದರ ಡಿ.ಕೆ.ಸುರೇಶ್ರನ್ನು ಬೆಂಬಲಿಸುವಂತೆ ಕಾಂಗ್ರೆಸ್ ಪಕ್ಷದ ಮುಖಂಡ ಮತ್ತು ಶಾಸಕ ಡಿ.ಕೆ.ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಮತ್ತು ಕೆಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರನ್ನು ಕೋರಿದ್ದಾರೆ.

ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಡಿ.ಕೆ.ಶಿವಕುಮಾರ್ ಅವರು ಸುಮಾರು ಅರ್ಧ ಗಂಟೆಗಳ ಕಾಲ ಅವರೊಂದಿಗೆ ಚರ್ಚಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಸೌಹಾರ್ದಯುತ ಭೇಟಿ. ವೈಯುಕ್ತಿಕವಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರೂ ಸಹ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರನ್ನು ಕೋರಿದ್ದೇನೆ. ಯಡಿಯೂರಪ್ಪ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.

ದಿನಕಳೆದಂತೆ ಲೋಕಸಭಾ ಉಪ ಚುನಾವಣೆಯು ರಂಗೇರುತ್ತಿದ್ದು, ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹರಸಾಹಸ ಮಾಡುತ್ತಿವೆ. ಅಲ್ಲದೆ ತಮ್ಮ ರಾಜಕೀಯ ವೈರತ್ವವನ್ನು ಕೂಡ ಮರೆತಿರುವ ರಾಜಕಾರಣಿಗಳು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಅವರ ಬೆಂಬಲಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.