'ಲೋಕಸಭೆ ಉಪ ಸಮರ' ನೀರಸ ಅಂತ್ಯ: ಶೇ.43ರಷ್ಟು ಮತದಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆ ನೀರಸ ಅಂತ್ಯ ಕಂಡಿದೆ. ಇಂದು ಸಂಜೆ 5.30ಕ್ಕೆ ಮತದಾನ ಮುಕ್ತಾಯಗೊಂಡಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಶೇ.40ರಷ್ಟು ಹಾಗೂ ಮಂಡ್ಯದಲ್ಲಿ ಶೇ.43.ರಷ್ಟು ಮತದಾನವಾಗಿದೆ.
ಎರಡು ಕ್ಷೇತ್ರದಲ್ಲೂ ಮತದಾನ ಪ್ರಕ್ರಿಯೆಗೆ ಮತದಾರ ಅಷ್ಟಾಗಿ ಉತ್ಸಾಹ ತೋರಿಸಿಲ್ಲ. ಕೆಲವು ಕಡೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಾತಿನ ಚಕಮಕಿ ಹೊರತುಪಡಿಸಿದರೆ, ಬಹುತೇಕ ಮತದಾನ ಪ್ರಕ್ರಿಯೆ ಶಾಂತಿಯುತವಾಗಿತ್ತು.
ಎರಡೂ ಕ್ಷೇತ್ರಗಳ 22 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಆಗಸ್ಟ್ 24ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಇಂದು ಮದ್ದೂರಿನ ಸೋಮನಹಳ್ಳಿಯ ಮತಗಟ್ಟೆ ಸಂಖ್ಯೆ 69ರಲ್ಲಿ ತಮ್ಮ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಅವರು, ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ. ಮೂರು ಪಕ್ಷಗ ಮಧ್ಯೆ ನಡೆಯುತ್ತಿರುವ ಚುನಾವಣೆ ಎಂದು ಹೇಳಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದರು.
ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪತ್ನಿ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ರಾಮನಗರದ ಕೇತಗಾನಹಳ್ಳಿಯಲ್ಲಿ ತಮ್ಮ ಮತ ಚಲಾಯಿಸಿದರು. ಇನ್ನು ವಸತಿ ಸಚಿವ ಅಂಬರೀಷ್ ಹಾಗೂ ಅವರ ಪತ್ನಿ ಸುಮಲತ ಅವರು ಮಂಡ್ಯದ ದೊಡ್ಡ ಅರಸೀಕೆರೆ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಕನಕಪುರದ ದೊಡ್ಡ ಆಲನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಸಹೋದರ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಮತದಾನ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


