370 ವಿಧಿ ವಿವಾದ; ಮೋದಿ ಹೇಳಿಕೆ ತರ್ಕಹೀನ: ಶರದ್ ಯಾದವ್

ನವದೆಹಲಿ: ಸಂವಿಧಾನದ ಕಲಂ 370ರ ಕುರಿತು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಯು ಅಧ್ಯಕ್ಷ ಶರದ್ ಯಾದವ್ ಅವರು, ಮೋದಿ ಹೇಳಿಕೆ ತರ್ಕಹೀನವಾದದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಜಮ್ಮುವಿನಲ್ಲಿ ನಡೆದಿದ್ದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡು, ಕಲಂ 370 ವಿಧಿಯ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ಕೂಲಂಕುಷ ಚರ್ಚೆಯಾಗಬೇಕಿದ್ದು, ಜಮ್ಮು ಮತ್ತು ಕಾಶ್ಮೀರ ರಾಜ್ಯದ ನಾಗರಿಕರಿಗೆ ದೇಶದಲ್ಲಿ ಎಸ್ಟಿ ಮತ್ತು ಎಸ್ಸಿ ಪಂಗಡಗಳಿಗೆ ನೀಡಲಾಗುತ್ತಿರುವ ಸವಲತ್ತುಗಳಂತೆಯೇ ವಿಶೇಷ ಹಕ್ಕುಗಳನ್ನು ನೀಡಬೇಕು ಎಂದು ಹೇಳಿದ್ದರು. ಆದರೆ ಅವರ ಈ ಹೇಳಿಕೆಗೆ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಜೆಡಿಯು ಅಧ್ಯಕ್ಷ ಶರದ್ ಯಾದವ್ ಅವರು ಮೋದಿ ಹೇಳಿಕೆ ತರ್ಕಹೀನವಾದದ್ದು. ಕಲಂ 370ರ ವಿವಾದ ಬಗೆಹರಿಯುವುತಂಹುದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಂತೆಯೇ ಸಿಪಿಐ(ಎಂ) ಪಕ್ಷದ ಮುಖಂಡ ಡಿ ರಾಜಾ ಅವರು ಶರದ್ ಯಾದವ್ ಅವರ ಹೇಳಿಕೆಗೆ ಧನಿಗೂಡಿಸಿದ್ದು, ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮೋದಿ ಈ ವಿವಾದಾತ್ಮಕ ವಿಚಾರದ ಬಗ್ಗೆ ಮಾತನಾಡಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಮೋದಿ ಅವರ ಈ ನಡವಳಿಕೆ ಅವರ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದ್ದಾರೆ.
ನರೇಂದ್ರ ಮೋದಿ ಅವರ ಹೇಳಿಕೆ ಕುರಿತು ಮಾತನಾಡಿರುವ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆ, ಮೋದಿ ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತೆಯೇ ಕೇಂದ್ರದ ನಿರಾವರಿ ಸಚಿವ ಹರೀಶ್ ರಾವತ್ ಅವರು ಮಾತನಾಡಿ, ಕಲಂ 370ರ ಕುರಿತು ಬಿಜೆಪಿಗೆ ಮಾಹಿತಿಯ ಕೊರೆತೆ ಇದ್ದು, ಪ್ರಸ್ತುತ ಚುನಾವಣೆ ಸನಿಹವಾಗುತ್ತಿರುವುದರಿಂದ ಅದು ತನ್ನ ಹಳೆಯ ಅಜೆಂಡಾವನ್ನು ಕೈಗೆತ್ತಿಕೊಂಡಿದೆ ಎಂದು ಹೇಳಿದ್ದಾರೆ.
ಕಲಂ 370ರ ಕುರಿತು ರಾಜಕೀಯ ಪಕ್ಷಗಳ ಮುಖಂಡರು ನರೇಂದ್ರ ಮೋದಿ ವಿರುದ್ಧ ಹರಿಹಾಯುತ್ತಿದ್ದರೆ ಇತ್ತ ಬಿಜೆಪಿ ಮುಖಂಡರು ಮಾತ್ರ ನರೇಂದ್ರ ಮೋದಿ ಅವರ ಬೆನ್ನಿಗೆ ನಿಂತಿದ್ದಾರೆ. ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಎಂದೇ ಖ್ಯಾತರಾದ ಉಮಾಭಾರತಿ, ಪಕ್ಷದ ಉಪಾಧ್ಯಕ್ಷ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ಜನತಾ ಪಕ್ಷದ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಮೋದಿ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ. ಕಲಂ 370ರ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಯ ಅವಶ್ಯಕತೆ ಇದ್ದು, ಜಾತ್ಯಾತೀತತೆಯ ಮುಖವಾಡ ಧರಿಸಿರುವ ಪಕ್ಷಗಳು ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


