ಡಿಕೆಶಿ, ರೋಷನ್ ಬೇಗ್ ನಾಳೆ ಸಚಿವರಾಗಿ ಪ್ರಮಾಣ

ಬೆಂಗಳೂರು: ಶಾಸಕರಾದ ಡಿ.ಕೆ.ಶಿವಕುಮಾರ್ ಹಾಗೂ ರೋಷನ್ ಬೇಗ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತವಾಗಿದ್ದು, ಇಬ್ಬರು ನಾಯಕರು ನಾಳೆ ರಾಜಭವನದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಾಳೆ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.
ಕಳೆದ ವಾರ ಸಂಪುಟ ವಿಸ್ತರಣೆಗೆ ಅಸ್ತು ಎಂದಿದ್ದ ಕಾಂಗ್ರೆಸ್ ಹೈಕಮಾಂಡ್, ಡಿ.ಕೆ.ಶಿವಕುಮಾರ್ ಹಾಗೂ ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿತ್ತು.
ಡಿ.ಕೆ.ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಅಸಮಾಧಾನ ಸ್ಫೋಟಗೊಳ್ಳಬಹುದು ಮತ್ತು ಬೇರೆಯವರು ಅತೃಪ್ತಗೊಳ್ಳಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು. ಆದರೆ ಇದಕ್ಕೆ ಕಿವಿಗೊಡದ ಹೈಕಮಾಂಡ್ ಈ ಇಬ್ಬರೂ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕು ಎಂದು ಸೂಚಿಸಿತ್ತು.
ಹೈಕಮಾಂಡ್ನ ಈ ಸೂಚನೆ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರು ಬುಧವಾರ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ.
ಕಳಂಕಿತರಿಗೆ ಸಂಪುಟದಲ್ಲಿ ಸ್ಥಾನಕೊಡುವುದು ಬೇಡ ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಅವರು ಸರ್ಕಾರ ರಚನೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ದೂರವಿಟ್ಟಿದ್ದರು. ಇದಲ್ಲದೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರೂ ಕಳಂಕಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ಸಿಎಂಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ.
ಸರ್ಕಾರ ಮತ್ತು ಪಕ್ಷದ ನಡುವೆ ಕಂದಕ ಸೃಷ್ಟಿಯಾಗಬಾರದು ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ದೃಷ್ಟಿಯಿಂದ ಇವರಿಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


