ಸೂರ್ಯನೆಲ್ಲಿ ಪ್ರಕರಣ: ಆರೋಪಿ ಧರ್ಮರಾಜನ್ ಬಂಧನ
ಶಿವಮೊಗ್ಗ: ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ಪೊಲೀಸ್ ತಂಡ ಧರ್ಮರಾಜನ್ ಎಂಬಾತನನ್ನು ಕರ್ನಾಟಕದ ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ.
ಆರೋಪಿ ಧರ್ಮರಾಜನ್ ಎಂಬ ವ್ಯಕ್ತಿ ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಕೇರಳದಲ್ಲಿ ಖಾಸಗಿ ಸುದ್ದಿವಾಹಿನಿ ನಡೆಸಿದ ಸಂದರ್ಶನವೊಂದರಲ್ಲಿ ಆರೋಪಿ ಧರ್ಮರಾಜನ್, ಪಿ.ಜೆ.ಕುರಿಯನ್ ಅವರ ಮೇಲೆ ಆರೋಪ ಹೊರಿಸಿದ್ದನು. ಅಲ್ಲದೆ ಅತ್ಯಾಚಾರ ಪ್ರಕರಣದಲ್ಲಿ ಸ್ವತಃ ಕುರಿಯನ್ ಅವರು ಭಾಗಿಯಾಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದನು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇರಳ ರಾಜ್ಯ ಸರ್ಕಾರ, ತನಿಖೆಗೆ ಆದೇಶಿಸಿತ್ತು. ಪ್ರಕರಣ ಸಂಬಂಧ ಆರೋಪಿ ಧರ್ಮರಾಜನ್ ಬಂಧನಕ್ಕೆ ಬಲೆ ಬೀಸಿತ್ತು. ಕೇರಳ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಧರ್ಮರಾಜನ್, ಕೇರಳದಿಂದ ನಾಪತ್ತೆಯಾಗಿದ್ದ. ಧರ್ಮರಾಜನ್ ನಾಪತ್ತೆಯ ಹಿಂದೆ ಕೇರಳ ರಾಜ್ಯಸಭೆಯ ಉಪಾಧ್ಯಕ್ಷ ಪಿ.ಜೆ. ಕುರಿಯನ್ ಅವರ ಕೈವಾಡವಿದೆ ಎಂದು ಪ್ರತಿಪಕ್ಷಗಳು ಆರೋಪಿಸಿ, ಕುರಿಯನ್ ಅವರು ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದವು. ವಿರೋಧ ಪಕ್ಷಗಳ ಆಗ್ರಹಕ್ಕೆ ಮಣಿಯದ ಕುರಿಯನ್ ನಿನ್ನೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿಮಾಡಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು.
ಪ್ರಕರಣದ ಪ್ರಮುಖ ಆರೋಪಿ ಎಂದು ಭಾವಿಸಲಾಗುತ್ತಿರುವ ಧರ್ಮರಾಜನ್ ಬಂಧನದೊಂದಿಗೆ ಅತ್ಯಾಚಾರ ಪ್ರಕರಣಕ್ಕೆ ಪ್ರಮುಖ ತಿರುವು ಸಿಕ್ಕಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

