ಬಿಎಸ್ವೈ ಬಿಜೆಪಿಗೆ ಕರೆತರುವುದಕ್ಕೆ ಅನಂತ್ ಒಪ್ಪಿಗೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮರಳಿ ಪಕ್ಷಕ್ಕೆ ಕರೆತರುವುದಕ್ಕೆ ಯಡಿಯೂರಪ್ಪ ಅವರ ಕಟ್ಟಾ ವಿರೋಧಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಯಡಿಯೂರಪ್ಪ ಅವರು ಆನಂತ್ ಕುಮಾರ್ ವಿರುದ್ಧ ಹಲವು ಬಾರಿ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಅಲ್ಲದೆ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಅನಂತ್ ಅವರೇ ಕಾರಣ ಎಂದು ನೇರವಾಗಿಯೇ ಆರೋಪಿಸಿದ್ದರು. ಆದರೆ ಇದೀಗ ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವುದಕ್ಕೆ ಅನಂತ್ ಕುಮಾರ್ ಒಪ್ಪಿಕೊಂಡಿರುವುದು ಅಚ್ಚರಿ ಮೂಡಿಸಿದೆ.
ಯಡಿಯೂರಪ್ಪ ಅವರನ್ನು ಬಿಜೆಪಿಗೆ ಕರೆತರಬೇಕು, ಅವರಿಲ್ಲದಿದ್ದರೆ ಲೋಕಸಭೆ ಚುನಾವಣೆ ಎದುರಿಸುವುದು ಕಷ್ಟ. ಹೀಗಾಗಿ ಅವರನ್ನು ಪಕ್ಷಕ್ಕೆ ಕರೆತರುವ ಯತ್ನ ಮಾಡಿ ಎಂದು ವರಿಷ್ಠರನ್ನು ಒತ್ತಾಯಿಸಿಲು ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ನಿಯೋಗ, ನಿನ್ನೆ ರಾತ್ರಿ ಮೊದಲ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿ ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಿತ್ತು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ನೇತೃತ್ವದಲ್ಲಿ ಮತ್ತೆ ಇಂದು ಬೆಳಗ್ಗೆ ಭೇಟಿ ಮಾಡಿದ ನಿಯೋಗ, ಅನಂತ್ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಈ ನಿಯೋಗದಲ್ಲಿ ಡಿ.ಬಿ.ಚಂದ್ರೇಗೌಡ, ಜನಾರ್ದನ ಸ್ವಾಮಿ, ಕೆ.ಜಿ.ಬೋಪಯ್ಯ, ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಹಾಗೂ ಬಸವರಾಜ ಬೊಮ್ಮಾಯಿ ಇದ್ದರು. ಚರ್ಚೆಯ ಬಳಿಕ ಬೊಮ್ಮಾಯಿ, ನಿರಾಣಿ ಹಾಗೂ ಕತ್ತಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ವರಿಷ್ಠರ ನಿರ್ಧಾರಕ್ಕೆ ಬದ್ಧ: ಈಶ್ವರಪ್ಪ
ಇನ್ನು ಬಿಎಸ್ವೈ ಅವರನ್ನು ಮತ್ತೆ ಪಕ್ಷಕ್ಕೆ ತರೆತರುವ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ನಾನು ನಿಷ್ಠಾವಂತ ಬಿಜೆಪಿ ಕಾರ್ಯಕರ್ತ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


