'ಅನ್ನಭಾಗ್ಯ' ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: 'ಹಸಿವು ಮುಕ್ತ ಕರ್ನಾಟಕ' ಘೋಷಣೆಯಡಿ 1 ರುಪಾಯಿಗೆ 1 ಕೆಜೆ ಅಕ್ಕಿಯಂತೆ ಪ್ರತಿ ಕುಟುಂಬಕ್ಕೆ 30 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂರು ಕುಟುಂಬಗಳಿಗೆ ಅಕ್ಕಿ ವಿತರಿಸುವ ಮೂಲಕ ಸಿಎಂ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಉದ್ಘಾಟಿಸಿದರು.
ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ, ನಮ್ಮ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇಂದಿನಿಂದ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ನೀಡುತ್ತಿದ್ದಾರೆ ಎಂದು ಹೇಳಿದರು.
ಇನ್ನು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸರ್ಕಾರ ಬಂದ ಎರಡು ತಿಂಗಳಲ್ಲೇ ಈ ಯೋಜನೆ ಜಾರಿಯಾಗಿದೆ. ಮುಂದಿನ ದಿನಗಳಲ್ಲಿ ನಿರಾಂತಕವಾಗಿ ಯೋಜನೆ ಮುಂದುವರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ಪಡಿತರ ವ್ಯವಸ್ಥೆ ಸುಧಾರಣೆ ಮಾಡುತ್ತೇವೆ ಮತ್ತು ಸೋರಿಕೆಯನ್ನು ತಡೆಗಟ್ಟುತ್ತೇವೆ ಎಂದು ಭರವಸೆ ನೀಡಿದರು.
ಬೋಗಸ್ ಕಾರ್ಡ್ ನಿಯಂತ್ರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಬಿಪಿಎಲ್ ಕಾರ್ಡ್ಗಳನ್ನು ಪ್ರತಿವರ್ಷ ಪರಿಷ್ಕರಿಸಲಾಗುವುದು ಎಂದು ಗುಂಡೂರಾವ್ ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ, ಸಾರಿಗೆ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಶಾಸಕರು, ನಗರ ಪಾಲಿಕೆ ಸದಸ್ಯರು ಭಾಗವಹಿಸಿದ್ದರು.
ಅಂತ್ಯೋದಯ, ಬಡತನ ರೇಖೆಯಿಂದ ಕೆಳಗಿರುವ ಕಾರ್ಡ್ದಾರರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು. ಒಬ್ಬ ಸದಸ್ಯರಿದ್ದರೆ 10 ಕೆಜಿ, 2 ಸದಸ್ಯರಿದ್ದರೆ 20 ಕೆಜಿ ಹಾಗೂ ಇಬ್ಬರಿಗಿಂತ ಹೆಚ್ಚಿನ ಸದಸ್ಯರಿದ್ದರೆ ಪ್ರತಿ ತಿಂಗಳು 30 ಕೆಜಿ ಅಕ್ಕಿ ಪಡೆಯಲಿದ್ದಾರೆ. ಅಂತ್ಯೋದಯ ಕಾರ್ಡ್ನಲ್ಲಿ ಸದಸ್ಯರ ಲೆಕ್ಕಾಚಾರ ಇಲ್ಲ. ಆ ಕಾರ್ಡ್ಗೆ ಪ್ರತಿ ತಿಂಗಳು 35 ಕೆಜಿ ಅಕ್ಕಿ ನೀಡಲಾಗುತ್ತದೆ. ಬಿಪಿಎಲ್, ಅಂತ್ಯೋದಯದಲ್ಲಿ ಒಟ್ಟು 98,35,701 ಕಾರ್ಡ್ಗಳಿದ್ದು, 20,459 ನ್ಯಾಯಬೆಲೆ ಅಂಗಡಿಗಳ ಮೂಲಕ ಯೋಜನೆಯಡಿ ಅಕ್ಕಿ ಖರೀದಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


