ಕಾಂಗ್ರೆಸ್ಗೆ ಅಧಿಕಾರ ದಾಹ ಹೆಚ್ಚಾಗಿದೆ: ಮೋದಿ

ಪಣಜಿ: ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ಆಯ್ಕೆ ಮಾಡಿರುವ ಪಕ್ಷದ ಹಿರಿಯ ನಾಯಕರಿಗೆ ನನ್ನ ಧನ್ಯವಾದ ಅರ್ಪಿಸುತ್ತೇನೆ ಎಂದು ಗುಜರಾತ್ನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪಣಜಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾತನಾಡಿದ ಮೋದಿ, ಪಕ್ಷ ನನಗೆ ಹೆಚ್ಚಿನ ಜವಾಬ್ದಾರಿ ನೀಡುವುದರ ಜೊತೆಗೆ ನನ್ನನ್ನು ಗೌರವಿಸಿದೆ. ಅದಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ನಾನು ಚಿರಋಣಿಯಾಗಿದ್ದೇನೆ. ಸಂಘಟಿತ ಹೋರಾಟಕ್ಕೆ ಪಕ್ಷ ಕಾರ್ಯಕರ್ತರ ಬೆಂಬಲದಿಂದಾಗಿ ನಾನು ಈ ಮಟ್ಟಕ್ಕೆ ಬಂದಿದ್ದು, ಪಕ್ಷದ ಕಾರ್ಯಕರ್ತರೇ ನನ್ನ ಶಕ್ತಿ. ಅವರ ಬೆಂಬಲ ನನ್ನಲ್ಲಿ ನೈತಿಕ ಬಲ ತಂದಿದೆ ಎಂದರು.
ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಹೆಚ್ಚಿನ ಜವಾಬ್ದಾರಿ ನೀಡಿದೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶತಾಯಗತಾಯ ಪ್ರಯತ್ನಿಸುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮೋದಿ ಅವರು, ಕಾಂಗ್ರೆಸ್ಗೆ ಅಧಿಕಾರದ ದಾಹ ಹೆಚ್ಚಾಗಿದೆ. ಭ್ರಷ್ಟಾಚಾರದ ಕೂಪದಲ್ಲಿ ಸಿಲುಕಿದ್ದು, ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಇಲ್ಲಿಯವರೆಗೂ ಕೇಂದ್ರದಲ್ಲಿ ಯುಪಿಎ ಸರ್ಕಾರಕ್ಕೆ ಉತ್ತಮ ಆಡಳಿತ ನೀಡಲು ಸಾಧ್ಯವಾಗಿಲ್ಲ ಎಂದು ಹರಿಹಾಯ್ದರು.
ಕೇಂದ್ರದ ವಿದೇಶಾಂಗ ನೀತಿ ದುರ್ಬಲವಾಗಿದ್ದು, ನೆರೆ ರಾಷ್ಟ್ರಗಳ ದಾಳಿಯನ್ನು ಹತ್ತಿಕ್ಕಲು ಯುಪಿಎ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಿಬಿಐ ಸಹ ಯುಪಿಎ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ಯುಪಿಎ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಸಿಬಿಐಗೆ ಸ್ವಾಯತ್ತ ಅಧಿಕಾರದ ನೀಡಬೇಕು. ಇಲ್ಲದಿದ್ದರೆ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಸಿಬಿಐಯಿಂದ ಪ್ರಾಮಾಣಿಕ ತನಿಖೆ ಸಾಧ್ಯವಿಲ್ಲ ಎಂದು ಮೋದಿ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


