ಎನ್ಡಿಎ ಸಖ್ಯ ತೊರೆಯಲು ಜೆಡಿ(ಯು) ಚಿಂತನೆ?

ಪಾಟ್ನಾ: ಎನ್ಡಿಎ ಮೈತ್ರಿಕೂಟದ ಪ್ರಮುಖ ಅಂಗಪಕ್ಷವಾಗಿರುವ ಜನತಾದಳ (ಯುನೈಟೆಡ್) ಮೈತ್ರಿ ಕಡಿದುಕೊಳ್ಳಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ರಾಜಿನಾಮೆ ವಿಚಾರ ಸುದ್ದಿಯಾಗುತ್ತಿರುವಾಗಲೇ ಎನ್ಡಿಎಗೆ ಮತ್ತೊಂದು ತಲೆ ನೋವು ಶುರುವಾದಂತಿದೆ. ಇತ್ತೀಚೆಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಎನ್ಡಿಎ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಜೆಡಿಯು, ಇದೀಗ ಎನ್ಡಿಎ ಮೈತ್ರಿಕೂಟವನ್ನೇ ತೊರೆಯುವ ಬಗ್ಗೆ ಚಿಂತನೆ ನಡೆಸಿದೆ.
ನರೇಂದ್ರಮೋದಿ ಅವರನ್ನು ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕಾಗಿ ಬೇಸರಗೊಂಡಿದ್ದ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರು, ನಿನ್ನೆ ಪಕ್ಷದಲ್ಲಿನ ತಮ್ಮ ಎಲ್ಲ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದರು. ಪಕ್ಷದಲ್ಲಿನ ಈ ಬಿಕ್ಕಟ್ಟನ್ನು ಬಗೆಹರಿಸಲು ಪಕ್ಷದ ನಾಯಕರು ಪ್ರಯತ್ನಿಸುತ್ತಿದ್ದು, ಅಡ್ವಾಣಿ ಅವರು ತಮ್ಮ ನಿರ್ಧಾರವನ್ನು ಹಿಂಪಡೆಯುವ ಸಾಧ್ಯತೆ ಇದೆ. ಆದರೆ ಇತ್ತ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಹಿರಿಯ ನಾಯಕ ನಿತೀಶ್ ಕುಮಾರ್ ಅವರು ಪಕ್ಷದ ತುರ್ತು ಸಭೆ ಕರೆದು, ಬಿಜೆಪಿಯಲ್ಲಿನ ಪ್ರಸಕ್ತ ಬೆಳವಣಿಗೆಗಳ ಕುರಿತು ಚರ್ಚಿಸುತ್ತಿದ್ದಾರೆ.
ಮೊದಲಿನಿಂದಲೂ ಮೋದಿ ಅವರನ್ನು ಎನ್ಡಿಎ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅವರು, ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ತೀವ್ರ ಬೇಸರಗೊಂಡಿದ್ದರು. ಹೀಗಾಗಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಎನ್ಡಿಎ ಮೈತ್ರಿಕೂಟದಿಂದ ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಡ್ವಾಣಿ ರಾಜಿನಾಮೆ ಕುರಿತು ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಿತೀಶ್ ಕುಮಾರ್ ಅವರು, ಅಡ್ವಾಣಿ ರಾಜಿನಾಮೆ ನಿರ್ಧಾರ ತಮಗೆ ನೋವು ತಂದಿದ್ದು, ಬಿಜೆಪಿಯ ನಡವಳಿಕೆ ಬೇಸರ ಮೂಡಿಸಿದೆ. ಎನ್ಡಿಎ ಮೈತ್ರಿಕೂಟದಲ್ಲಿ ಅಡ್ವಾಣಿ ಅವರು ಪ್ರಮುಖ ನಾಯಕರಾಗಿದ್ದು, ಅವರಿಲ್ಲದ ಎನ್ಡಿಎಯಲ್ಲಿ ತಮ್ಮ ಪಕ್ಷ ಕೂಡ ಕಾರ್ಯನಿರ್ವಹಿಸುವುದಿಲ್ಲ. ತಾವು ಎನ್ಡಿಎ ಮೈತ್ರಿಕೂಟವನ್ನು ತೊರೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.
ಅಲ್ಲದೆ ಮೋದಿ ಅವರಿಗೆ ಚುನಾವಣಾ ಪ್ರಚಾರದ ಮೇಲುಸ್ತುವಾರಿ ಜವಾಬ್ದಾರಿ ನೀಡಿರುವ ಕುರಿತು ಮಾತನಾಡಿದ ಅವರು, ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಈಗಲೇ ನಿರ್ಣಯಿಸುವುದು ಕಷ್ಟ. ಪಕ್ಷದ ಸಭೆ ಕರೆದು ತಾವು ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


