ಈಗಿನ ಸುದ್ದಿ

ಎನ್‌ಡಿಎ ಮೈತ್ರಿ ಕಡಿದುಕೊಳ್ಳಲು ಜೆಡಿ(ಯು)ಸಿದ್ಧತೆ

ಎನ್‌ಡಿಎ ಮೈತ್ರಿ ಕಡಿದುಕೊಳ್ಳಲು ಜೆಡಿ(ಯು)ಸಿದ್ಧತೆ
Published On :

ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಪ್ರಮುಖ ಅಂಗಪಕ್ಷವಾಗಿರುವ ಜನತಾದಳ (ಯುನೈಟೆಡ್), ಮೈತ್ರಿ ಕಡಿದುಕೊಳ್ಳಲು ಸಿದ್ಧತೆ ನಡೆಸಿದ್ದು, ನಾಳೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಪಾಟ್ನಾದಲ್ಲಿ ಇಂದು ನಡೆದ ಕಾರ್ಯಕರ್ತರ ಸಭೆಯಲ್ಲಿ ಎನ್‌ಡಿಎ ಸಖ್ಯ ತೊರೆಯುವ ಕುರಿತು ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ಪಕ್ಷದ ಅಧ್ಯಕ್ಷ ಶರದ್ ಯಾದವ್ ಅವರು ಕೂಡ ಇದೇ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನಾಳೆ ಪಕ್ಷದ ಸಂಸದೀಯ ಸಭೆ ಕರೆದಿರುವ ನಿತೀಶ್ ಕುಮಾರ್ ಅವರು ಸಭೆಯಲ್ಲಿ ಪಕ್ಷದ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಸಭೆಯ ನಂತರ ಮಾಧ್ಯಮಗಳಿಗೆ ಸ್ಪಷ್ಟನೇ ನೀಡಿರುವ ನಿತೀಶ್ ಕುಮಾರ್ ಅವರು ಶಾಯರಿ ಮೂಲಕ ಬಿಜೆಪಿ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. 'ಅವರು ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತಾರೆ ಆದರೆ ಸಾಯುವಂತಹ ಔಷಧಿ ನೀಡುತ್ತಾರೆ ಎನ್ನುವ ಮೂಲಕ ಬಿಜೆಪಿ ವಿರುದ್ಧದ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಅಲ್ಲದೆ ನಾಳೆ ಪಾಟ್ನಾದಲ್ಲಿ ಸಂಪುಟ ಸಭೆ ಕರೆದಿರುವ ನಿತೀಶ್, ಸಭೆಯಲ್ಲಿ ತಮ್ಮ ಪಕ್ಷದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಇದಾದ ಬಳಿಕ ನಡೆಯುವ ಪಕ್ಷದ ಸಂಸದೀಯ ಸಭೆಯಲ್ಲಿ ತಮ್ಮ ತೀರ್ಮಾನವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಜೆಡಿ(ಯು) ಪಕ್ಷದ ಅಧ್ಯಕ್ಷ ಶರದ್ ಯಾದವ್ ಅವರು, ಪ್ರಸಕ್ತ ಬೆಳವಣಿಗೆ ಕುರಿತು ಬಿಜೆಪಿಯೊಂದಿಗೆ ಚರ್ಚಿಸುತ್ತಿದ್ದೇವೆ. ಆದರೆ ಇದುವರೆವಿಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದಷ್ಟೇ ಹೇಳಿದರು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಜೆಡಿಯು, ಇದೀಗ ಎನ್‌ಡಿಎ ಮೈತ್ರಿಕೂಟವನ್ನೇ ತೊರೆಯುವ ಬಗ್ಗೆ ಗಂಭೀರ ಚಿಂತನೆ ನಡೆಸಿರುವುದು ಬಿಜೆಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮೊದಲಿನಿಂದಲೂ ಮೋದಿ ಅವರನ್ನು ಎನ್‌ಡಿಎ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುತ್ತಿರುವುದನ್ನು ತೀವ್ರ ವಿರೋಧಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ತೀವ್ರ ಬೇಸರಗೊಂಡಿದ್ದರು. ಅಲ್ಲದೆ ಮೈತ್ರಿಕೂಟದಿಂದ ಶತಾಯಗತಾಯ ಹೊರಬರಲೇ ಬೇಕೆಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಹೀಗಾಗಿಯೇ ನಿತೀಶ್ ಕುಮಾರ್ ಅವರು ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಈ ನಡುವೆ ಎನ್‌ಡಿಎ ಮೈತ್ರಿ ಕೂಟದಿಂದ ಜೆಡಿ(ಯು) ಹೊರನಡೆದರೆ ಮುಂದಿನ ಪರ್ಯಾಯ ಮಾರ್ಗೋಪಾಯಗಳ ಕುರಿತು ಮತ್ತು ಸ್ಥಿತಿಗತಿಗಳ ಕುರಿತು ಬಿಜೆಪಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.