ಪ್ರಧಾನಿ ಸಿಂಗ್, ಸೋನಿಯಾ ವೈಮಾನಿಕ ಸಮೀಕ್ಷೆ

ನವದೆಹಲಿ: ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಉತ್ತರ ಭಾರತದ ರಾಜ್ಯಗಳಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ವೈಮಾನಿಕ ಸಮೀಕ್ಷೆ ಕೈಗೊಳ್ಳುವ ಸಾಧ್ಯತೆ ಇದೆ.
ಪ್ರವಾಹ ಪೀಡಿತ ಪ್ರಮುಖ ರಾಜ್ಯಗಳಾದ ಉತ್ತರಾಖಂಡ್, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ದೆಹಲಿಯ ಕೆಲ ಪ್ರದೇಶಗಳಲ್ಲಿ ಪ್ರಧಾನಿ ಸಿಂಗ್ ಮತ್ತು ಸೋನಿಯಾ ವೈಮಾನಿಕ ಸಮೀಕ್ಷೆ ಕೈಗೊಳ್ಳಲ್ಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಸಮೀಕ್ಷೆಯ ಆರಂಭಿಕ ಹಂತವಾಗಿ ತೀವ್ರ ಹಾನಿಗೊಳಗಾಗಿರುವ ಉತ್ತರಾಖಂಡ್ ರಾಜ್ಯದ ಪ್ರಮುಖ ಯಾತ್ರಾ ತಾಣ ಕೇದರನಾಥ್ದಲ್ಲಿ ಇಂದು ಸಮೀಕ್ಷೆ ನಡೆಸಲ್ಲಿದ್ದು, ಅನಂತರ ರುದ್ರಪ್ರಯಾಗ, ಋಷಿಕೇಶ, ಹರಿದ್ವಾರ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಇಂದು ನವದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳನ್ನು ರವಾನಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಪ್ರಧಾನಮಂತ್ರಿ ಸಚಿವಾಲಯದ ಅಧಿಕಾರಿಗಳು ಆಯಾ ರಾಜ್ಯಗಳ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವಿತ್ತ ಸಚಿವ ಪಿ.ಚಿದಂಬರಂ ಅವರು, ಉತ್ತರಾಖಂಡ್ನಲ್ಲಿನ ಪ್ರವಾಹ ಪರಿಸ್ಥಿತಿ ನಿನ್ನೆಗೆ ಹೋಲಿಸಿದರೆ ಕೊಂಚ ಕಡಿಮೆಯಾಗಿದೆ. ಆದರೆ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಗಾಗಿ ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ಹೆಲಿಕಾಪ್ಟರ್ ಮತ್ತು ಯಾಂತ್ರಿಕ ಬೋಟ್ಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅಲ್ಲದೆ ಪ್ರವಾಹದಲ್ಲಿ ಸಿಲುಕಿರುವವರಿಗೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ರವಾನಿಸಲು ಕ್ರಮಕೈಗೊಳ್ಳಲಾಗಿದ್ದು, ಈ ಬಗ್ಗೆ ಆಹಾರ ಸಚಿವ ಕೆ.ವಿಯಥಾಮಸ್ ಅವರೊಂದಿಗೆ ಚರ್ಚಿಸಿದ್ದೇವೆ. ವಾಯುಪಡೆಯ ಸಿಬ್ಬಂದಿಗಳ ಮೂಲಕ ಪ್ರವಾಹದಲ್ಲಿ ಸಿಲುಕಿಕೊಂಡಿರುವವರಿಗೆ ಆಹಾರ ಪೊಟ್ಟಣಗಳನ್ನು ವಿತರಿಸುವ ಕಾರ್ಯ ಈಗಾಗಲೇ ಚಾಲ್ತಿಯಲ್ಲಿದೆ. ಅಂತೆಯೇ ಈಗಾಗಲೇ ನೀರಿನಲ್ಲಿ ಮುಳುಗಿರುವ ಮತ್ತು ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಸ್ಥಳೀಯರನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಚಿದಂಬರಂ ತಿಳಿಸಿದರು.
ಅಂತೆಯೇ ಸಭೆಯಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮಾತನಾಡಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುವಂತೆ ವಾಯುಪಡೆಗಳಿಗೆ ಸೂಚನೆ ನೀಡಲಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ ಸಾವಿರಾರು ಸೈನಿಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ ಸುಮಾರು 20 ಐಎಎಫ್ ಹೆಲಿಕಾಪ್ಟರ್ಗಳನ್ನು ರವಾನಿಸಲಾಗಿದೆ. ಉತ್ತರಾಖಂಡ್ನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಸುಮಾರು 5000 ಜನರನ್ನು ರಕ್ಷಣಾ ಪಡೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಬದ್ರಿನಾಥ್ ಆಶ್ರಮದಲ್ಲಿ ಸುಮಾರು 2000 ಮಂದಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ ಎಂದು ಶಿಂಧೆ ತಿಳಿಸಿದರು.
ಒಟ್ಟಾರೆ ಕಳೆದ ನಾಲ್ಕು ದಿನಗಳಿಂದ ಸುರಿದ ಭಾರಿ ಮಳೆಗೆ ಉತ್ತರ ಭಾರತ ನಲುಗಿಹೋಗಿದ್ದು, ಯಾತ್ರೆಗೆ ತೆರಳಿದ್ದ ನಾನಾ ರಾಜ್ಯಗಳ ಪ್ರವಾಸಿಗರು ದಿಕ್ಕಾಪಾಲಾಗಿ ಹೋಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪ್ರವಾಹದಿಂದಾಗಿ ತಮ್ಮ ಆಸ್ತಿಪಾಸ್ತಿಗಳನ್ನು ಕಳೆದುಕೊಂಡವರ ಸಂಖ್ಯೆ ಏರುತ್ತಿದ್ದು, ಇದುವರೆವಿಗೂ ಸುಮಾರು 1 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. ಸ್ಥಳೀಯ ಸರ್ಕಾರಗಳು ತಾತ್ಕಾಲಿಕ ಗಂಜಿ ಕೇಂದ್ರಗಳನ್ನು ತೆರೆದಿವೆಯಾದರೂ ನಿರಾಶ್ರಿತರ ಸಂಖ್ಯೆ ಅಪಾರ ಪ್ರಮಾಣದಲ್ಲಿರುವುದರಿಂದ ಇದು ಪ್ರಯೋಜನಕಾರಿಯಾಗುತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


