ತೆಲಂಗಾಣ: ಚಿದು, ಶಿಂಧೆ ವಿರುದ್ಧ ಚೀಟಿಂಗ್ ಕೇಸ್

ಹೈದರಾಬಾದ್: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಕುರಿತಂತೆ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವರಾದ ಚಿದಂಬರಂ ಮತ್ತು ಸುಶೀಲ್ ಕುಮಾರ್ ಶಿಂಧೆ ಅವರ ವಿರುದ್ಧ ಹೈದರಾಬಾದ್ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಹೈದರಾಬಾದ್ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಎಲ್.ಬಿ.ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಮತ್ತು ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಐಪಿಸಿ ಸೆಕ್ಷನ್ 420(ಮೋಸ)ರ ಪ್ರಕಾರ ದೂರು ದಾಖಲಿಸಿಕೊಳ್ಳಲಾಗಿದೆ. ಈ ಹಿಂದೆ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಈ ಇಬ್ಬರು ಸಚಿವರು ತಪ್ಪು ಹೇಳಿಕೆ ನೀಡುವ ಮೂಲಕ ಹೋರಾಟಗಾರರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿ ವಕೀಲ ನರೇಶ್ ಕುಮಾರ್ ಎಂಬುವವರು, ವಕೀಲರ ಸಂಘಕ್ಕೆ ದೂರು ನೀಡಿದ್ದರು.
ನರೇಶ್ ಕುಮಾರ್ ಅವರ ದೂರು ಸ್ವೀಕರಿಸಿದ್ದ ಜಿಲ್ಲಾ ವಕೀಲರ ಸಂಘ, ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ಜನವರಿ 28ರಂದು ಕೇಂದ್ರ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಸೂಚಿಸಿತ್ತು.
2009ರ ಡಿಸೆಂಬರ್ 9ರಂದು ಅಂದು ಗೃಹ ಸಚಿವರಾಗಿದ್ದ ಪಿ.ಚಿದಂಬರಂ ಅವರು, ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿಚಾರ ಪ್ರಗತಿಯಲ್ಲಿದ್ದು, ಶೀಘ್ರವೇ ತೆಲಂಗಾಣ ಭಾಗದ ಜನರಿಗೆ ಸಿಹಿ ಸುದ್ದಿ ನೀಡುವುದಾಗಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲಿಯೇ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಕೂಡ ಚಿದು ಹೇಳಿಕೆಗೆ ಬೆಂಬಲ ಸೂಚಿಸಿ ಹೇಳಿಕೆ ನೀಡಿದ್ದರು. ಆದರೆ ಇದ್ದಕ್ಕಿದ್ದಂತೆಯೇ ಹೇಳಿಕೆ ಬದಲಿಸಿದ್ದ ಇಬ್ಬರು ಸಚಿವರು, ತೆಲಂಗಾಣ ವಿವಾದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಚರ್ಚೆ ಅಗತ್ಯ ಎಂದು ಹೇಳಿದ್ದರು.
ಸಚಿವರ ಈ ಹೇಳಿಕೆಯನ್ನು ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಿರುವ ನ್ಯಾಯಾಲಯ ಅವರ ವಿರುದ್ಧ ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


