ಶಸ್ತ್ರಚಿಕಿತ್ಸೆ ಯಶಸ್ವಿ, ಪ್ರಾಣಾಪಾಯದಿಂದ ಶಾಸಕ ಸಿ.ಸಿ.ಪಾಟೀಲ್ ಪಾರು

ಬೆಳಗಾವಿ: ಗನ್ಮ್ಯಾನ್ ಅಜಾಗರೂಕತೆಯಿಂದ ಗುಂಡು ತಗುಲಿದ ಪರಿಣಾಮ ಚಿಂತಾಜನಕ ಸ್ಥಿತಿಯಲ್ಲಿದ್ದ ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ.ಪಾಟೀಲ್ ಅವರಿಗೆ ಸೋಮವಾರ ಬೆಳಗ್ಗೆ ನಡೆಸಿದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಪ್ರಾಣಾಪಾಯದಿಂದ ಪಾಟೀಲ್ ಪಾರಾಗಿದ್ದಾರೆ.
ಶಸ್ತ್ರ ಚಿಕಿತ್ಸೆ ಬಳಿಕ ಮಾತನಾಡಿದ ಕೆಎಲ್ಇ ಆಸ್ಪತ್ರೆಯ ವೈದ್ಯ ಡಾ.ಗೋಧಿ ಅವರು, ನಾಲ್ಕು ಗಂಟೆಗಳ ಕಾಲ ನಡೆದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದಿದ್ದಾರೆ. ಅಲ್ಲದೆ ಪಾಟೀಲ್ ಅವರ ದೇಹದ ಎಡಭಾಗಕ್ಕೆ ಗುಂಡು ತಗುಲಿದ್ದು, ಆ ಗುಂಡು ಹೊಟ್ಟೆಯ ಮೂಲಕ ಹೊರ ಬಂದಿದೆ. ದೇಹದ ಯಾವುದೇ ಭಾಗದಲ್ಲಿ ಗುಂಡು ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಗುಂಡೇಟಿನಿಂದಾಗಿ ದೇಹದೊಳಗೆ ಜಠರಕ್ಕೆ ನಾಲ್ಕು ಇಂಚು ತೂತು ಬಿದ್ದಿದೆ ಮತ್ತು ದೊಡ್ಡ ಕರುಳಿನ ಭಾಗದಲ್ಲಿ ಗ್ಯಾಂಗ್ರಿನ್ ಆಗಿದ್ದು, ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಮತ್ತು ಅವರಿಗೆ 10 ಬಾಟಲಿ ರಕ್ತ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗೋಧಿ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಗದಗ ಜಿಲ್ಲೆಯ ಮೆಣಸಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದ ವೇಳೆ ಈ ದುರ್ಘಟನೆ ಸಂಭವಿಸಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪಾಟೀಲ್ ಅವರನ್ನು ಹುಬ್ಬಳ್ಳಿಯ ಲೈಫ್ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದ್ದರಿಂದ ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಅವರನ್ನು ಹುಬ್ಬಳ್ಳಿಯಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಕೆಎಲ್ಇ ಆಸ್ಪತ್ರೆಯ ವೈದ್ಯರು ನಡೆಸಿದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಪಾಟೀಲ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರನ್ನು 24 ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿರಸಲಾಗಿದೆ (ಐಸಿಯು) ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ ಅವರು ತಿಳಿಸಿದ್ದಾರೆ.
ತನಿಖೆಗೆ 2 ಪ್ರತ್ಯೇಕ ತಂಡ ರಚನೆ
ಶಾಸಕ ಸಿ.ಸಿ.ಪಾಟೀಲ್ ಅವರಿಗೆ ಗುಂಡು ತಗುಲಿದ ಪ್ರಕರಣದ ತನಿಖೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶರಣಪ್ಪ ಅವರು ಸೋಮವಾರ ಹೇಳಿದ್ದಾರೆ.
ಘಟನೆಯಲ್ಲಿ ಶಾಸಕರ ಗನ್ಮ್ಯಾನ್ ಮಂಜುನಾಥ್ ಅವರಿಗೂ ಗಾಯಳಾಗಿದ್ದು, ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಪ್ರಕರಣದ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ಒಂದು ತಂಡ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಮತ್ತೊಂಡು ತಂಡ ರಚಿಸಲಾಗಿದೆ ಎಂದು ಶರಣಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


