ಸಂಜೆ 6.30ಕ್ಕೆ ರಾಜಿನಾಮೆ: ಸಿಎಂ ಶೆಟ್ಟರ್

ಬೆಂಗಳೂರು: ಕರ್ನಾಟಕ ಜನತೆಯ ಆದೇಶಕ್ಕೆ ತಲೆಬಾಗುತ್ತೇನೆ ಮತ್ತು ಇಂದು ಸಂಜೆ 6.30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಸಿಎಂ ಶೆಟ್ಟರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರು ಮಾತನಾಡಿದರು.
'ಫಲಿತಾಂಶ ಅನಿರೀಕ್ಷಿತವಾಗಿದ್ದು, ಕರ್ನಾಟಕ ಜನತೆಯ ತೀರ್ಪಿಗೆ ತಲೆಬಾಗುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ತೀರ್ಪು ಸಹಜ. ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಕಳೆದ ಐದು ವರ್ಷಗಳ ಕಾಲ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟ ಕರ್ನಾಟಕ ಜನತೆಗೆ ಮತ್ತು ಆಡಳಿತದಲ್ಲಿ ಸಹಕರಿಸಿದ ಅಧಿಕಾರಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದು ಶೆಟ್ಟರ್ ಹೇಳಿದರು.
ಕಾಂಗ್ರೆಸ್ನ ಗೆಲವು ನಿಜಕ್ಕೂ ಆ ಪಕ್ಷದ ಸಕಾರಾತ್ಮಕ ಗೆಲುವಲ್ಲ. ಕಳೆದ ಬಾರಿ ಪ್ರತಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿರಲಿಲ್ಲ. ಏನೇ ಆಗಲಿ ಜನತೆಯ ಆದೇಶಕ್ಕೆ ತಲೆ ಬಾಗಿ ನಾವು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು, ಪ್ರಮಾಣಿಕವಾಗಿ ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ. ಇಂದು ಮಧ್ಯಾಹ್ನವೇ ರಾಜ್ಯಪಾಲರನ್ನು ಕಂಡು ನನ್ನ ರಾಜಿನಾಮೆ ನೀಡಲು ಮುಂದಾಗಿದ್ದೆ. ಆದರೆ ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಅವಕಾಶ ದೊರೆಯಲಿಲ್ಲ. ಇಂದು ಸಂಜೆ 6.30ಕ್ಕೆ ಭೇಟಿಯ ಅವಕಾಶ ದೊರೆತಿದ್ದು, ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ನನ್ನ ರಾಜಿನಾಮೆ ನೀಡುತ್ತೇನೆ ಎಂದು ಶೆಟ್ಟರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರು, ಚುನಾವಣೆಯಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಸ್ಥಾನಗಳು ಲಭಿಸಿವೆ. ಇದು ಪಕ್ಷಕ್ಕೆ ತೀವ್ರ ನಿರಾಸೆ ಉಂಟುಮಾಡಿದೆ. ಆದರೆ ಜನತೆಯ ತೀರ್ಪಿಗೆ ತಲೆಬಾಗುತ್ತೇನೆ. ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪಕ್ಷದಲ್ಲಿ ಉಂಟಾದ ಕೆಲ ಗೊಂದಲಗಳು ನಮ್ಮ ಸೋಲಿಗೆ ಕಾರಣವಾದವು. ಪ್ರಭಾವಿ ಮಂತ್ರಿಗಳು ಸಹ ಸೋತಿದ್ದಾರೆ. ಹೀಗಾಗಿ ಇದೇ 14 ಮತ್ತು 15 ರಂದು ಉಪಾಧ್ಯಕ್ಷ ಡಿವಿ ಸದಾನಂದಗೌಡ ಮತ್ತು ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರುಗಳ ನೇತೃತ್ವದಲ್ಲಿ ಸಭೆ ನಡೆಸಿ, ಸೋಲಿಗೆ ಕಾರಣವಾದ ಅಂಶಗಳ ಕುರಿತು ಪರಾಮರ್ಶೆ ನಡೆಸುತ್ತೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


