ಈಗಿನ ಸುದ್ದಿ

ಸಿದ್ದು ಸಂಪುಟದಲ್ಲಿ ಪರಮೇಶ್ವರಗೆ ಸಚಿವ ಸ್ಥಾನ

ಸಿದ್ದು ಸಂಪುಟದಲ್ಲಿ ಪರಮೇಶ್ವರಗೆ ಸಚಿವ ಸ್ಥಾನ
Published On :

ಬೆಂಗಳೂರು: ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಸಿದ್ದುಗೆ ಪ್ರತಿಸ್ಪರ್ಧಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಚುನಾವಣೆಯಲ್ಲಿ ಸೋತು, ಈಗ ಸಚಿವ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ.

ರಾಜ್ಯದಲ್ಲಿ ತಾನು ಸೋತು, ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಪರಮೇಶ್ವರ ಅವರಿಗೆ ಸಿದ್ದು ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಪರಮೇಶ್ವರ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವ ಮೂಲಕ ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷರಾಗಿರುವ ಪರಮೇಶ್ವರ ಅವರನ್ನು ಮೇಲ್ಮನೆಗೆ ಆರಿಸುವ ಮೂಲಕ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಪರಮೇಶ್ವರ ಅವರಿಗೆ ಚುನಾವಣೆಯ ಸೋಲು ಬಾರಿ ಹಿನ್ನಡೆಯನ್ನುಂಟು ಮಾಡಿತ್ತು. ತಮ್ಮ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಸ್ಪರ್ಧಿಸಿದ್ದ ಪರಮೇಶ್ವರ್ ಅವರು ಜೆಡಿಎಸ್ ಅಭ್ಯರ್ಥಿ ಸುಧಾಕರ್ ಲಾಲ್ ವಿರುದ್ಧ ಸೋತಿದ್ದರು. ಹೀಗಾಗಿ ಮುಖ್ಯಮಂತ್ರಿಯಾಗುವ ಅವರ ಕನುಸು ಬಹುತೇಕ ಕಮರಿಹೋಗಿತ್ತು.

ಹಾಗಿದ್ದೂ ತಮ್ಮ ಪ್ರಯತ್ನ ಮುಂದುವರೆಸಿದ್ದ ಪರಮೇಶ್ವರ ಅವರು ತಮ್ಮ ಬೆಂಬಲಿಗ ಶಾಸಕರ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದರು. ಆದರೆ ಇಂದು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ವೀಕ್ಷಕರ ತಂಡ ಶಾಸಕರ ಅಭಿಪ್ರಾಯ ಸಂಗ್ರಹಿಸಿದೆ. ಅದರಂತೆ ಬಹುತೇಕ ಶಾಸಕರ ಒಲವು ಸಿದ್ದರಾಮಯ್ಯ ಅವರ ಪರವಾಗಿದ್ದು, ಅವರನ್ನೇ ಮುಂದಿನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದ ಪರಮೇಶ್ವರ ಅವರನ್ನು ಕಡೆಗಣಿಸದ ಹೈಕಮಾಂಡ್, ಅವರಿಗೆ ಸಂಪುಟ ದರ್ಜೆಯ ಸ್ಥಾನ ನೀಡಲು ಮುಂದಾಗಿದೆ. ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪರಮೇಶ್ವರ್ ಅವರು ಕೂಡ ಸಚಿವರಾಗಿ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.