'ಸತ್ಯ'ದ ಹೆಸರಲ್ಲಿ ಸಿದ್ದರಾಮಯ್ಯ ಪ್ರಮಾಣ

ಬೆಂಗಳೂರು: ಕರ್ನಾಟಕ ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಮತ್ತು ವೈಯುಕ್ತಿಕವಾಗಿ 22ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡರು. ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಪ್ರಮಾಣವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 'ಸತ್ಯ'ದ ಹೆಸರಲ್ಲಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರು ಸಿದ್ದುಗೆ ಪ್ರತಿಜ್ಞಾ ವಿಧಿ ಭೋದಿಸಿದರು.
ಇಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಅಲ್ಲದೆ ಕಾಂಗ್ರೆಸ್ ನ ಹಿರಿಯ ನಾಯಕರು, ಕೇಂದ್ರ ಸಚಿವರು, ಶಾಸಕರು, ಆಪ್ತ ಸ್ನೇಹಿತರು, ಸಾಹಿತಿಗಳು ಮತ್ತು ವಿಪಕ್ಷ ನಾಯಕರು ಆಗಮಿಸಿದ್ದರು. ಕೇಂದ್ರ ಸಚಿವ ಮುನಿಯಪ್ಪ, ಸಿಎಂ ಇಬ್ರಾಹಿಂ, ಆಸ್ಕರ್ ಫರ್ನಾಂಡಿಸ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್, ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ವೀರಪ್ಪಮೋಯ್ಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂಧನ್ ಮಿಸ್ತ್ರಿ, ಶಾಸಕರಾದ ರೋಷನ್ ಬೇಗ್, ಹ್ಯಾರಿಸ್, ವೀರಣ್ಣ ಮತ್ತಿಕಟ್ಟಿ, ಜಾಫರ್ ಶರೀಫ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ನಟ ಅಂಬರೀಶ್, ಮಹಾ ರಾಷ್ಟ್ರಾ ಸಿಎಂ ಪೃಥ್ವಿರಾಜ್ ಚೌವ್ಹಾಣ್ ಅವರು ಆಗಮಿಸಿದ್ದರು. ಅಂತೆಯೇ ಶತಾಯುಷಿ ಸಾಹಿತಿ ಮತ್ತು ನಿಘಂಟು ತಜ್ಞ ವೆಂಕಟಸುಬ್ಬಯ್ಯ, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರ ಶೇಖರ್ ಮತ್ತು ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಶ್ರೀರಾಮುಲು ಸೇರಿದಂತೆ ಘಟಾನುಘಟಿ ನಾಯಕರು ಆಗಮಿಸಿದ್ದರು.
ಗಣ್ಯರ ಮತ್ತು ಸಹಸ್ರಾರು ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11.42ರ ಶುಭಗಳಿಗೆಯಲ್ಲಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


