ಈಗಿನ ಸುದ್ದಿ

ಸಂಪುಟ ವಿಸ್ತರಣೆ: ಪರಶ್ವರ್‌ಗೆ ದೆಹಲಿಯಿಂದ ಬುಲಾವ್

ಸಂಪುಟ ವಿಸ್ತರಣೆ: ಪರಶ್ವರ್‌ಗೆ ದೆಹಲಿಯಿಂದ ಬುಲಾವ್
Published On :

ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ದೆಹಲಿಯಿಂದ ಬುಲಾವ್ ಬಂದಿದ್ದು, ಇಂದು ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ.

ದೆಹಲಿಗೆ ತೆರಳಲಿರುವ ಪರಮೇಶ್ವರ್ ಅವರು, ಇಂದು ಸಂಜೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಮಾಡುವ ಸಾಧ್ಯತೆ ಇದೆ. ಪರಮೇಶ್ವರ್ ಅವರಿಗೆ ರಾಜ್ಯ ಉಸ್ತುವಾರಿ ಮಧಸೂಧನ್ ಮಿಸ್ತ್ರಿ ಅವರು ಸಾಥ್ ನೀಡಲಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸಚಿವಸ್ಥಾನದ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯತೊಡಗಿದೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಿನ್ನೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಇತ್ತ ಶಾಸಕರ ಸಚಿವರಾಗುವ ಕನಸು ಚಿಗುರೊಡೆಯತೊಡಗಿದೆ. ಇದಕ್ಕಾಗಿ ಈಗಾಗಲೇ ಹಲವು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಹಿರಿಯ ನಾಯಕರ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ವಿವಿಧ ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿರುವ ಪಕ್ಷದ ಪ್ರಮುಖರು ಇದಕ್ಕಾಗಿ ಹೈಕಮಾಂಡ್ ಮೇಲೆ ತಮ್ಮ ಪ್ರಭಾವ ಬೀರುತ್ತಿದ್ದಾರೆ.

ನಾವು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳು

ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳೆಂದು ಕಾಂಗ್ರೆಸ್‌ನ ಇಬ್ಬರು ನಾಯಕರು ತಮ್ಮ ಮನದಾಸೆಯನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ವೀರಣ್ಣ ಮತ್ತಿಕಟ್ಟಿ ಮತ್ತು ಕಾಂಗ್ರೆಸ್ ಶಾಸಕ ಕೆ.ಬಿ ಕೋಳಿವಾಡ ಅವರು, ತಾವು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳೆಂದು ಹೇಳಿಕೊಂಡಿದ್ದಾರೆ. ಅಲ್ಲದೆ ಹೈಕಮಾಂಡ್ ತಮಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಸತತ 7 ವರ್ಷಗಳ ಬಳಿಕ ಕರ್ನಾಟದಲ್ಲಿ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್‌ಗೆ ಈಗ ಸಚಿವ ಸಂಪುಟ ವಿಸ್ತರಣೆ ಮಾಡುವ ತಲೆನೋವು ಶುರುವಾಗಿದೆ. ಚುನಾವಣೆ ವೇಳೆಯಲ್ಲಿ ಟಿಕೆಟ್ ಹಂಚಿಕೆ ವಿಚಾರಕ್ಕಾಗಿಯೇ ಸಾಕಷ್ಟು ವಿರೋಧ ಎದುರಿಸಿದ್ದ ಕಾಂಗ್ರೆಸ್ ಹೈಕಮಾಂಡ್ ಇದೀಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಮತ್ತಷ್ಟು ವಿರೋಧ ಎದುರಿಸಲು ಸಿದ್ದವಾಗಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.