ಈಗಿನ ಸುದ್ದಿ

ಕ್ರೀಡೆಗೆ ರಾಜಕೀಯದ ಮಿಶ್ರಣ ಬೇಡ: ಪ್ರಧಾನಿ

ಕ್ರೀಡೆಗೆ ರಾಜಕೀಯದ ಮಿಶ್ರಣ ಬೇಡ: ಪ್ರಧಾನಿ
Published On :

ಪ್ರಧಾನಿಯವರ ವಿಶೇಷ ವಿಮಾನ: ಕ್ರೀಡೆಯಲ್ಲಿ ರಾಜಕೀಯ ಎಂದೂ ಮಿಶ್ರಣವಾಗಬಾರದು ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಐದು ದಿನಗಳ ಜಪಾನ್ ಪ್ರವಾಸವನ್ನು ಪೂರ್ಣಗೊಳಿಸಿ ವಿಶೇಷ ವಿಮಾನದಲ್ಲಿ ಭಾರತಕ್ಕೆ ವಾಪಸಾಗುತ್ತಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು, ವಿಶೇಷ ವಿಮಾನದಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದರು. 'ಜಪಾನ್ ಮತ್ತು ಥಾಯ್‌ಲ್ಯಾಂಡ್ ಪ್ರವಾಸ ಬಹುತೇಕ ಯಶಸ್ವಿಯಾಗಿದೆ. ಉಭಯ ದೇಶಗಳ ನಡುವಿನ ಮಾತುಕತೆ ಫಲಪ್ರದವಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರಧಾನಿ ಸಿಂಗ್ ಅವರು ಹೇಳಿದರು.

ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದರು. ಅಂತೆಯೇ ಹಲವು ಮಸೂದೆಗಳು ನೆನೆಗುದಿಗೆ ಬಿದ್ದಿರುವ ಕುರಿತು ಗಮನ ಸೆಳೆದಾಗ ಉತ್ತರಿಸಿದ ಸಿಂಗ್, ಹಲವು ಪ್ರಮುಖ ಮಸೂದೆಗಳ ಅಂಗೀಕಾರ ಬಾಕಿ ಉಳಿದಿದೆ. ಪ್ರತಿಪಕ್ಷಗಳ ತೀವ್ರ ವಿರೋಧವೇ ಇದಕ್ಕೆ ಕಾರಣ ಎಂದು ಹೇಳಿದರು.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಬಗ್ಗೆ ಸುದ್ದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಂಗ್, ಕ್ರೀಡೆಯಲ್ಲಿ ಯಾವಾಗಲೂ ರಾಜಕೀಯ ಮಿಶ್ರಣವಾಗಬಾರದು ಎಂದು ಸಿಂಗ್ ಚುಟುಕಾಗಿ ಉತ್ತರಿಸಿದರು. ಅಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡುತ್ತದೆಯೇ ಎಂಬ ಪ್ರಶ್ನೆಗೆ, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ನಾನು ಈ ಬಗ್ಗೆ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ಹೇಳಿದರು. ಅಲ್ಲದೆ ಬಿಸಿಸಿಐನಲ್ಲಿ ರಾಜಕಾರಣಿಗಳು ಪ್ರಮುಖ ಹುದ್ದೆಗಳನ್ನು ಅಲಂಕರಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಂಗ್, ಈ ಪ್ರಶ್ನೆ ನನಗೆ ಸೂಕ್ತವೆನಿಸುವುದಿಲ್ಲ ಎಂದು ಹೇಳಿದರು. ಅಲ್ಲದೆ ಕ್ರೀಡೆಯಲ್ಲಿ ರಾಜಕೀಯ ಮಿಶ್ರಣವಾಗಬಾರದು ಎಂದು ಪುನರುಚ್ಛರಿಸಿದರು.

ಸೋನಿಯಾ ಗಾಂಧಿ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಿಂಗ್

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಭಿನ್ನಾಭಿಪ್ರಾಯವಿದೆ ಎಂಬ ಮಾಧ್ಯಮಗಳ ವರದಿಯನ್ನು ನಿರಾಕರಿಸಿದ ಮನಮೋಹನ್ ಸಿಂಗ್ ಅವರು, ತಾಮ್ಮ ಮತ್ತು ಸೋನಿಯಾ ಗಾಂಧಿ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ತಾವು ಎಲ್ಲ ವಿಚಾರಗಳನ್ನು ಅವರೊಂದಿಗೆ ಚರ್ಚಿಸಿಯೇ ತೀರ್ಮಾನ ಕೈ ಗೊಳ್ಳುತ್ತೇವೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

'ತಮ್ಮ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಾಂಧವ್ಯ ಚೆನ್ನಾಗಿಯೇ ಇದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಪರಸ್ಪರ ಒಂದಾಗಿಯೇ ಕೆಲಸ ಮಾಡುತ್ತಿದ್ದೇವೆ. ಪರಸ್ಪರ ಸಮಾಲೋಚನೆ ನಡೆಸಿಯೇ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ. ತೀರಾ ಅಗತ್ಯವೆನಿಸುವ ಮತ್ತು ಪ್ರಮುಖ ವಿಚಾರಗಳ ಬಗ್ಗೆ ನಾನು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ' ಎಂದು ಪ್ರಧಾನಿ ಸಿಂಗ್ ಸ್ಪಷ್ಟಪಡಿಸಿದ್ದಾರೆ.


ಒಟ್ಟಾರೆ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ವಿದೇಶಗಳಲ್ಲಿಯೂ ಸದ್ದು ಮಾಡುತ್ತಿದ್ದು, ಸ್ವತಃ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೂಡ ಈ ಬಗ್ಗೆ ಬೇಸರಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.