ನಕ್ಸಲ್ ದಾಳಿ ಉಗ್ರರ ದಾಳಿಗಿಂತ ದೊಡ್ಡದು: ಶಿಂಧೆ

ರಾಯಪುರ: ಛತ್ತೀಸ್ಗಡದಲ್ಲಿ ನಡೆದ ನಕ್ಸಲ್ ದಾಳಿ ಉಗ್ರರ ದಾಳಿಗಿಂತಲೂ ದೊಡ್ಡದು ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
ಇಂದು ರಾಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಸುಶೀಲ್ ಕುಮಾರ್ ಶಿಂಧೆ, ಇದೇ ಮೊದಲ ಬಾರಿಗೆ ನಕ್ಸಲ್ ದಾಳಿಯ ಕುರಿತು ಮಾಹಿತಿ ನೀಡಿದ್ದಾರೆ. 'ಛತ್ತೀಸ್ಗಡದಲ್ಲಿ ನಡೆದ ನಕ್ಸಲ್ ದಾಳಿ ಉಗ್ರರ ದಾಳಿಗಿಂತಲೂ ದೊಡ್ಡದಾಗಿದ್ದು, ಘಟನೆಯಿಂದ ತಮಗೆ ಆಘಾತವಾಗಿದೆ. ದಾಳಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಂಸ್ಥೆ ತನಿಖೆ ನಡೆಸುತ್ತಿದೆ. ಮೇಲ್ನೋಟಕ್ಕೆ ಇದರಲ್ಲಿ ಭದ್ರತಾ ವೈಫಲ್ಯ ಎದ್ದುಕಾಣುತ್ತದೆ' ಶಿಂಧೆ ಎಂದು ಹೇಳಿದರು.
'ನಕ್ಸಲ್ ದಾಳಿಯಿಂದಾಗಿ ಛತ್ತೀಸ್ಗಡದ ಬಸ್ತಾರ್ ಗ್ರಾಮದಲ್ಲಿ ಛತ್ತೀಸ್ಗಡ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು, ರಾಜ್ಯಾಧ್ಯಕ್ಷರು ಸೇರಿ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ಘಟನೆಯಲ್ಲಿ ಪಕ್ಷದ ಪ್ರಮುಖ ಮುಖಂಡರು ಮತ್ತು ಹಲವು ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣದ ತನಿಖೆಯ ಹಂತದಲ್ಲಿರುವುದರಿಂದ ತಾವು ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ'.
'ಆದರೆ ಸರ್ಕಾರದ ವತಿಯಿಂದ ಮತ್ತೆ ಇಂತಹ ಘಟನೆ ಮರುಕಳಿಸದಂತೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಪ್ರಕರಣ ಕುರಿತು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ' ಎಂದು ಶಿಂಧೆ ತಿಳಿಸಿದರು.
ಛತ್ತೀಸ್ಗಡದಲ್ಲಿ ನಡೆದಿದ್ದ ನಕ್ಸಲ್ ದಾಳಿ ನಡೆದ ವೇಳೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ವಿದೇಶ ಪ್ರವಾಸ ಕೈಗೊಂಡಿದ್ದರು. ಆದರೆ ಘಟನೆ ಕುರಿತು ಅವರು ಇದುವರೆವಿಗೂ ಯಾವುದೇ ರೀತಿಯ ಹೇಳಿಕೆ ನೀಡಿರಲಿಲ್ಲ. ಗೃಹ ಸಚಿವರ ನಡೆ ವಿಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಹೀಗಾಗಿ ಸಚಿವ ಶಿಂಧೆ ಅವರ ಮೇಲೆ ಒತ್ತಡ ಹೆಚ್ಚಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


