ಕೋರ್ ಕಮಿಟಿ ಸಭೆ: ಆಹಾರ ಭದ್ರತೆ, ತೆಲಂಗಾಣ ಕುರಿತು ಚರ್ಚೆ

ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಂಡಿದ್ದಾರೆ.
ಸಭೆಯಲ್ಲಿ ಸಂಸತ್ ಕಲಾಪದ ಕುರಿತು ಚರ್ಚಿಸಲಾಗುತ್ತಿದ್ದು, ಯುಪಿಎ ಸರ್ಕಾರದ ಬಹು ನಿರೀಕ್ಷಿತ ಆಹಾರ ಭದ್ರತಾ ಮಸೂದೆಯನ್ನು ಅಂಗೀಕಾರಗೊಳಿಸುವ ಕುರಿತು ಚರ್ಚಿಸಲಾಗುತ್ತಿದೆ. ಅಂತೆಯೇ ಸಭೆಯಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿಚಾರದ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ.
ಆಹಾರ ಭದ್ರತಾ ಮಸೂದೆಗೆ ಪ್ರತಿಪಕ್ಷಗಳ ವಿರೋಧ ಅಡ್ಡಿಯಾಗುತ್ತಿದ್ದು, ವಿಪಕ್ಷಗಳ ವಿರೋಧದ ನಡುವೆಯೂ ಮಸೂದೆಯನ್ನು ಅಂಗೀಕಾರ ಮಾಡುವ ಮಾರ್ಗಗಳ ಕುರಿತು ಕಾಂಗ್ರೆಸ್ ನಾಯಕರು ಸಭೆಯಲ್ಲಿ ಚರ್ಚಿಸುತ್ತಿದ್ದಾರೆ. ಅಲ್ಲದೆ ನೆನೆಗುದಿಗೆ ಬಿದ್ದಿರುವ ಹಲವು ಮಸೂದೆಗಳನ್ನು ಮಂಡಿಸುವುದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯುವ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ 2014ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಹಾರ ಭದ್ರತೆ ಮತ್ತು ಭೂ ಸ್ವಾಧೀನದಂತಹ ಕೆಲ ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಯುಪಿಎ ಸರ್ಕಾರ ಸರ್ವ ರೀತಿಯ ಪ್ರಯತ್ನ ನಡೆಸುತ್ತಿದೆ.
ಆದರೆ ಯುಪಿಎ ಸರ್ಕಾರದ ಮಸೂದೆಗಳಿಗೆ ಪ್ರಮುಖ ವಿರೋಧ ಪಕ್ಷ ಬಿಜೆಪಿ ತೊಡಕಾಗಿದ್ದು, ಕಲಾಪದಲ್ಲಿ ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಅಲ್ಲದೆ ಆಂಧ್ರಪ್ರದೇಶದ ಪ್ರಮುಖ ವಿಚಾರವಾಗಿರುವ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಕೂಡ ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಸರ್ಕಾರಕ್ಕೆ ಗಡವು ನೀಡಿದ್ದ ಆಂಧ್ರ ಪ್ರದೇಶದ ಹಿರಿಯ ಕಾಂಗ್ರೆಸ್ ಮುಖಂಡ ಕೇಶವರಾವ್ ಅವರು ಈಗಾಗಲೇ ಪಕ್ಷವನ್ನು ತೊರೆದಿದ್ದು, ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವನ್ನು ಸೇರ್ಪಡೆಯಾಗಲು ಮುಂದಾಗಿದ್ದಾರೆ.
ಅಷ್ಟೇ ಅಲ್ಲದೆ ತೆಲಂಗಾಣ ಭಾಗದ ಮತ್ತಷ್ಟು ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಕಾಂಗ್ರೆಸ್ ತೊರೆಯುವ ಕುರಿತು ಮಾಹಿತಿಗಳು ಲಭ್ಯವಾಗಿವೆ. ಹೀಗಾಗಿಯೇ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ತೆಲಂಗಾಣ ವಿಚಾರದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


