ಈಗಿನ ಸುದ್ದಿ

ರಾಹುಲ್ ಒತ್ತಡಕ್ಕೆ ಮಣಿದ ಕೇಂದ್ರ: ಸುಗ್ರೀವಾಜ್ಞೆ ವಾಪಸ್

ರಾಹುಲ್ ಒತ್ತಡಕ್ಕೆ ಮಣಿದ ಕೇಂದ್ರ: ಸುಗ್ರೀವಾಜ್ಞೆ ವಾಪಸ್
Published On :

ನವದೆಹಲಿ: ಕಡೆಗೂ ಕಾಂಗ್ರೆಸ್ ಯುವರಾಜನ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು, ದೋಷಿ ಶಾಸಕ/ಸಂಸದರನ್ನು ರಕ್ಷಿಸಲು ಹೊರಡಿಸಲಾಗಿದ್ದ ವಿವಾದಾತ್ಮಕ ಸುಗ್ರೀವಾಜ್ಞೆಯನ್ನು ಬುಧವಾರ ಹಿಂಪಡೆಯಲಾಗಿದೆ.

ಇಂದು ಸಂಜೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಸಂಬಂಧ ಇಂದು ಮಧ್ಯಾಹ್ನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ವಿವರಣೆ ಸಹ ನೀಡಿದ್ದಾರೆ.

ಕೇಂದ್ರ ಕಾನೂನು ಸಚಿವ ಕಪಿಲ್ ಸಿಬಲ್ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ವಿಚಾರ ಪ್ರಸ್ತಾಪಿಸಿ, ಅದನ್ನು ಹಿಂಪಡೆಯುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರು. ಅದನ್ನು ಸಂಪುಟ ಸಭೆ ಅಂಗೀಕರಿಸಿತು.

ಇದಕ್ಕು ಮುನ್ನ ನಡೆದ ಕಾಂಗ್ರೆಸ್ ಕೋರ್ ಕಮಿಟಿ ಸಭೆಯಲ್ಲೂ ಸಹ ಸುಗ್ರೀವಾಜ್ಞೆಯನ್ನು ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಇದೇ ವಿಚಾರವಾಗಿ ಇಂದು ಬೆಳಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ರಾಹುಲ್ ಗಾಂಧಿ ಅವರು, ತಾವು ಪ್ರಧಾನಿ ಹುದ್ದೆಗೆ ಅಗೌರವ ತೋರಿಲ್ಲ. ಸರ್ಕಾರದ ಸುಗ್ರೀವಾಜ್ಞೆ ಬಗ್ಗೆ ದೇಶದ ಜನತೆ ಹೊಂದಿದ್ದ ಅಭಿಪ್ರಾಯವನ್ನು ಮಾತ್ರ ಹೊರಹಾಕಿದ್ದೇನೆ. ಇದರಿಂದ ನೀವು ಮುಜುಗರಕ್ಕೀಡಾಗುವ ಅವಶ್ಯಕತೆ ಇಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.

ದೋಷಿ ಸಂಸದರನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿದ್ದ ಸುಗ್ರೀವಾಜ್ಞೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ  ಆಕ್ಷೇಪಿಸಿದ್ದರು. ಇದರಿಂದಾಗಿ ಕಾಂಗ್ರೆಸ್ ಮತ್ತು ಯುಪಿಎ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿತ್ತು. ಜತೆಗೆ ರಾಷ್ಟ್ರಪತಿ ಕೂಡ ಕೆಲವೊಂದು ವಿಚಾರಗಳಲ್ಲಿ ಸ್ಪಷ್ಟನೆ ಬಯಸಿದ್ದರು.

ವಿವಿಧ ಪ್ರಕರಣಗಳಲ್ಲಿ ಸಿಲುಕಿ 2ವರ್ಷಕ್ಕಿಂತ ಅಧಿಕ ಕಾಲ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳನ್ನು ಸಾರ್ವಜನಿಕ ಹುದ್ದೆಗಳಿಂದ ವಜಾಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸೆಪ್ಟಂಬರ್ 24ರಂದು ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.