ಆಂಧ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದಿಲ್ಲ: ಶಿಂಧೆ

ನವದೆಹಲಿ: ಆಂಧ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ರಾಜಕೀಯ ಪಕ್ಷಗಳು ಪಟ್ಟು ಹಿಡಿದಿದ್ದು, ಸದ್ಯ ಆಂಧ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಆಲೋಚನೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಯಾವುದೇ ಆಲೋಚನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಆಂಧ್ರ ವಿಭಜನೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು, ಆಂಧ್ರದಲ್ಲಿನ ಸದ್ಯದ ಪರಿಸ್ಥಿತಿಯ ಕುರಿತಂತೆ ಚರ್ಚಿಸಲಾಗುತ್ತಿದೆ ಎಂದರು.
ಆಂಧ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತಂತೆ ಇಂದು ಸಂಜೆ ನಡೆಯುವ ಕೇಂದ್ರ ಸಚಿವರ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಯಾವುದೇ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ. ಆಂಧ್ರದಲ್ಲಿ ಸದ್ಯ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.
ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಕುರಿತಂತೆ ಈ ಮುಂಚೆ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್‌ಮೋಹನ್ ರೆಡ್ಡಿ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ಚರ್ಚಿಸಲಾಗಿತ್ತು. ಆಗ ಇಬ್ಬರು ತಮ್ಮ ಸಮ್ಮತಿ ಸೂಚಿಸಿದ್ದರು, ಆದರೆ ಇದೀಗ ವಿರೋಧಿಸುತ್ತಿದ್ದಾರೆ ಎಂದು ಶಿಂಧೆ ತಿಳಿಸಿದರು.
ಆಂಧ್ರದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಸಾಧ್ಯವಾಗುತ್ತಿಲ್ಲ. ಆಂಧ್ರ ವಿಭಜನೆ ಖಂಡಿಸಿ ಸೀಮಾಂಧ್ರದಲ್ಲಿ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಬಿಡುತ್ತಿಲ್ಲ. ಹೀಗಾಗಿ ಆಂಧ್ರ ಸರ್ಕಾರ ಪರಿಸ್ಥಿತಿಯನ್ನು ಸ್ಥಿಮಿತಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಮಧ್ಯೆ ಪ್ರವೇಶಿಸುವಂತೆ ಹೈಕೋರ್ಟ್‌ಗೆ ನಿನ್ನೆಯಷ್ಟೇ ಮನವಿ ಮಾಡಿತ್ತು.
ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸುತ್ತಿದ್ದಂತೆ ಆಂಧ್ರದ ಸೀಮಾಂಧ್ರ ಮತ್ತು ರಾಯಾಲಸೀಮಾದಲ್ಲಿ ಅಖಂಡ ಆಂಧ್ರಕ್ಕಾಗಿ ಹೋರಾಟ ತೀವ್ರಗೊಂಡಿದೆ. ಇದೇ ವೇಳೆ ವಿಭಜನೆ ಖಂಡಿಸಿ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್‌ಮೋಹನ್ ರೆಡ್ಡಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಉಪವಾಸದಲ್ಲಿ ತೊಡಗಿರುವುದು ಕಾಂಗ್ರೆಸ್ ಅನ್ನು ಮತ್ತಷ್ಟು ಇಕ್ಕಟಿಗೆ ಸಿಲುಕಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


