'ಮುಲಾಯಂ ಉ.ಪ್ರದೇಶದ ಮೋದಿ': ಅಜಿತ್ ಸಿಂಗ್
ಘಾಜಿಯಾಬಾದ್: ಕೋಮುಗಲಭೆ ಪೀಡಿತ ಉತ್ತರ ಪ್ರದೇಶದ ಮುಜಾಫರ್ನಗರಕ್ಕೆ ಭೇಟಿ ನೀಡಲು ಯತ್ನಿಸಿದ ಕೇಂದ್ರ ವಿಮಾನಯಾನ ಸಚಿವ ಹಾಗೂ ಆರ್ಎಲ್ಡಿ ಮುಖ್ಯಸ್ಥ ಅಜಿತ್ ಸಿಂಗ್ ಅವರನ್ನು ಘಾಜಿಯಾಬಾದ್ನಲ್ಲಿ ಬಂಧಿಸಿ, ನಂತರ ಬಿಡುಗಡೆ ಮಾಡಲಾಗಿದೆ.
ಹಿಂಸಾಚಾರಾ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಯತ್ನಿಸಿದ ಕೇಂದ್ರ ಸಚಿವರನ್ನು ಸಮಾಜವಾದಿ ಪಕ್ಷ(ಎಸ್ಪಿ)ದ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಈ ಘಟನೆಯ ಬಳಿಕ ಟ್ವೀಟ್ ಮಾಡಿರುವ ಅಜಿತ್ ಸಿಂಗ್, ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಕೋಮು ಗಲಭೆಯ ಹೆಸರಿನಲ್ಲಿ ರಾಜ್ಯವನ್ನು ಇಬ್ಭಾಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮೋದಿಯಾಗಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಆರ್ಎಲ್ಡಿ ಮುಖ್ಯಸ್ಥ, ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ತಮ್ಮ ಸಮುದಾಯದ ಜನತೆಯನ್ನು ಉದ್ದೇಶಿಸಿ ಮಾತನಾಡಲು ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದಿದ್ದಾರೆ.
ಇನ್ನು ಅಜಿತ್ ಸಿಂಗ್ ಆರೋಪವನ್ನು ತಳ್ಳಿಹಾಕಿರುವ ಮುಲಾಯಂ ಸಿಂಗ್ ಯಾದವ್ ಅವರು, ಗುಜರಾತ್ ಗಲಭೆಗೆ ಬಲಿಯಾದವರಿಗೆ ಇಲ್ಲಿಯವರೆಗೂ ನ್ಯಾಯ ಸಿಕ್ಕಿಲ್ಲ. ಆದರೆ ಉತ್ತರ ಪ್ರದೇಶದಲ್ಲಿ ಆ ರೀತಿ ಆಗುವುದಿಲ್ಲ. ಇಲ್ಲಿ ಎಲ್ಲರಿಗೂ ನ್ಯಾಯ ಸಿಗಲಿದೆ ಎಂದಿದ್ದಾರೆ.
ಆಗ್ರಾದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಲಾಯಂ, ಸಚಿವ ಅಝಂ ಖಾನ್ ಮತ್ತು ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಮಾಜವಾದಿ ಪಕ್ಷ ಪ್ರಜಾತಂತ್ರ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿ ಎಲ್ಲರೂ ತಮ್ಮತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹೇಳಿಕೊಳ್ಳಬಹುದು ಎಂದಿದ್ದಾರೆ.
ಮುಜಾಫರ್ನಗರ ಗಲಭೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸರಿಯಾದ ಸಮಯದಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ತಮ್ಮದೇ ಸರ್ಕಾರದ ಬಗ್ಗೆ ಅಝಂ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

