ಈಗಿನ ಸುದ್ದಿ

ನರೇಂದ್ರ ಮೋದಿಗೆ ಪ್ರಧಾನಿ ಅಭ್ಯರ್ಥಿ ಪಟ್ಟ

ನರೇಂದ್ರ ಮೋದಿಗೆ ಪ್ರಧಾನಿ ಅಭ್ಯರ್ಥಿ ಪಟ್ಟ
Published On :

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ ಆಡ್ವಾಣಿ ಅವರ ವಿರೋಧದ ನಡುವೆಯೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್‌ಸಿಂಗ್ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದರು.

ಇಂದು ಸಂಜೆ 5 ಗಂಟೆಗೆ ನಡೆದ ಸಂಸದೀಯ ಸಭೆಯಲ್ಲಿ ಈ ತೀರ್ಮಾನ ಕೈಗೊಂಡ ನಂತರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ರಾಜನಾಥ್ ಸಿಂಗ್ ಘೋಷಿಸಿದರು. ಪ್ರಧಾನಿ ಅಭ್ಯರ್ಥಿ ಎಂದು ಮೋದಿ ಹೆಸರನ್ನು ಘೋಷಿಸುತ್ತಿದಂತೆ ಪಕ್ಷದ ಹಿರಿಯ ನಾಯಕರೆಲ್ಲರು ಸೇರಿ ಮೋದಿ ಅವರಿಗೆ ಶುಭಾ ಕೋರಿದರು.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಮೋದಿ ಅವರು, ಪ್ರಧಾನಿ ಅಭ್ಯರ್ಥಿಯಾಗಿ ಮಾಡಿರುವುದಕ್ಕೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ನನ್ನ ಧನ್ಯವಾದಗಳು. ನಾನು ತುಂಬಾ ಸಾಮಾನ್ಯ ಕುಟುಂಬದಿಂದ ಬಂದವನು. ಅಲ್ಲದೆ ಬಿಜೆಪಿಯಲ್ಲಿ ಹಲವು ದಶಕಗಳಿಂದ ನಾನು ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಈ ಸ್ಧಾನ ನೀಡಿರುವುದಕ್ಕೆ ನಾನು ಪಕ್ಷಕ್ಕೆ ಚಿರಋಣಿ ಎಂದರು.

ರಾಷ್ಟ್ರೀಯ ನಾಯಕರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬಿಜೆಪಿ ಹಿರಿಯ ನಾಯಕ ಆಡ್ವಾಣಿ ಅವರ ಆಶೀರ್ವಾದಿಂದ ಈ ಸ್ಥಾನ ಸಿಕ್ಕಿದೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಸರ್ವ ಪ್ರಯತ್ನ ಮಾಡುತ್ತೇನೆ. ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ, ಬೆಲೆ ಏರಿಕೆ ವಿರುದ್ಧ ನಮ್ಮ ಹೋರಾಟ, ಬಿಜೆಪಿಗೆ ದೇಶದ ಜನತೆಯ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಗುರು ಮತ್ತು ಪಕ್ಷದ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಖುದ್ದು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.

ನರೇಂದ್ರ ಮೋದಿ ಅವರಿಗೆ ಪ್ರಧಾನಿ ಅಭ್ಯರ್ಥಿ ಪಟ್ಟ ಕಟ್ಟುತ್ತಿದ್ದಂತೆ ಕೇಂದ್ರ ಬಿಜೆಪಿ ಕಚೇರಿಯ ಆವರಣದಲ್ಲಿ ಮೋದಿ ಅವರಿಗೆ ಜಯಕಾರ ಕೂಗುತ್ತಾ ಪಟಾಕಿ ಸಿಡಿಸಿ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ಸಂತಸ ವ್ಯಕ್ತಪಡಿಸಿದ ಯಡಿಯೂರಪ್ಪ
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಕರ್ನಾಟಕ ಜನತಾ ಪಕ್ಷ(ಕೆಜೆಪಿ)ದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮೋದಿ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಬೇಕೆಂಬುದು ದೇಶದ ಜನತೆಯ ಆಶಯವಾಗಿತ್ತು. ಅದರಂತೆ ಪಕ್ಷ ಇಂದು ಮೋದಿ ಅವರ ಹೆಸರನ್ನು ಘೋಷಿಸಿದೆ. ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ನಾವು ಸರ್ವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.