ನ್ಯಾಯಾಧೀಶರ ನೇಮಕಕ್ಕೆ ಮಂಡಳಿ ವ್ಯವಸ್ಥೆ: ಸದಾಶಿವಂ ಸಮರ್ಥನೆ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಪಿ.ಸದಾಶಿವಂ ಅವರು ಮಂಡಳಿ ವ್ಯವಸ್ಥೆಯ ಮೂಲಕ ಉನ್ನತ ನ್ಯಾಯಾಂಗಕ್ಕೆ ನ್ಯಾಯಾಧೀಶರ ನೇಮಕವನ್ನು ಸಮರ್ಥಿಸಿಕೊಂಡಿದ್ದಾರೆ.
ನವದೆಹಲಿಯ ಖಾಸಗಿ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಕಾನೂನಿನ ಪ್ರಭುತ್ವ(Rule of Law) ಎಂಬ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ಅವರು, ನ್ಯಾಯಾಂಗ ಮಂಡಳಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡಿದ್ದಾರೆ.
'ನಾನು ಕೇಂದ್ರ ಸರ್ಕಾರ ಮಂಡಿಸಿರುವ ನೂತನ ಮಸೂದೆಯ ವಿಷಯಗಳ ಕುರಿತು ಚರ್ಚಿಸುವುದಿಲ್ಲ. ಆದರೆ ಉನ್ನತ ನ್ಯಾಯಾಂಗಕ್ಕೆ ನ್ಯಾಯಾಧೀಶರನ್ನು ಆಯ್ಕೆ ಮಾಡುವ ಪ್ರಸ್ತುತ ಮಂಡಳಿ ವ್ಯವಸ್ಥೆ ಸಮರ್ಥವಾಗಿದ್ದು, ಸರ್ಕಾರಕ್ಕೆ ಇದನ್ನು ಬದಲಿಸುವ ವಿಶೇಷ ಅಧಿಕಾರ ಕೂಡ ಇದೆ. ಸರ್ಕಾರದ ವಿಶೇಷ ಅಧಿಕಾರದಿಂದ ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆಯಾಗಿದ್ದು, ಇದನ್ನು ಒಪ್ಪಿಕೊಳ್ಳುವುದು ಅಥವಾ ತಿರಸ್ಕರಿಸುವುದು ಜನತೆಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದರು.
ಇದಕ್ಕೂ ಮುಂಚೆ ಮಾತನಾಡಿದ ಭಾರತೀಯ ಬಾರ್ ಅಸೋಸಿಯೇಷನ್ ಅಧ್ಯಕ್ಷ ಅನಿಲ್ ದಿವಾನ್ ಅವರು, ನ್ಯಾಯಾಂಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಏಕಪಕ್ಷೀಯವಾಗಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿದರು. ಅಲ್ಲದೆ ಈ ಹಿಂದೆ ಮಸೂದೆಯ ಕುರಿತು ಕರುಡು ಪ್ರತಿಯ ನಕಲು ಬೇಕೆಂದು ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಈ ವರೆಗೂ ತಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ದಿವಾನ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರು ದಿವಾನ್ ಅವರ ಮಾತಿಗೆ ಬೆಂಬಲ ಸೂಚಿಸಿ, ತಾವು ಕೂಡ ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಅದಕ್ಕೆ ಸಂಬಂಧಪಟ್ಟ ಸಚಿವಾಲಯಗಳ ಗಮನ ಸೆಳೆದಿದ್ದೇನೆ. ಆದರೆ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯಲ್ಲಿ ಸರ್ಕಾರದ ಅಭಿಪ್ರಾಯವನ್ನು ಕೂಡ ಗಣನೆಗೆ ತೆಗೆದುಕೊಳ್ಳುವಂತೆ ಸರ್ಕಾರ ಸೂಚಿಸಿತು ಎಂದು ಹೇಳಿದರು.
ಒಟ್ಟಾರೆ ಇಂದು ನಡೆದ ವಿಚಾರ ಸಂಕಿರಣದಲ್ಲಿ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರು, ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಪರೋಕ್ಷವಾಗಿ ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


