ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಕ್ಕೆ ಉಗ್ರರು ಸಂಚು
ನವದೆಹಲಿ: ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಕ್ಕೆ ಇಂಡಿಯನ್ ಮುಜಾಹಿದ್ದೀನ್(ಐಎಂ) ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಮತ್ತೆ ಹೈದಾರಾಬಾದ್ ಉಗ್ರರ ಪ್ರಮುಖ ಟಾರ್ಗೆಟ್ ಆಗಿದೆ.
ಬಂಧಿತ ಐಎಂ ಉಗ್ರ ಯಾಸಿನ್ ಭಟ್ಕಳ್ ವಿಚಾರಣೆ ವೇಳೆ ಈ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ದೇಶಾದ್ಯಂತ ಎಚ್ಚರಿಕೆ ರವಾನಿಸಿದೆ. ಅಲ್ಲದೆ ಬಹುತೇಕ ಹೈದರಾಬಾದ್‌ನಲ್ಲೇ ಉಗ್ರರು ಸ್ಫೋಟ ನಡೆಸಲು ಪ್ಲಾನ್ ಮಾಡಿದ್ದಾರೆ ಎಂದು ಹೇಳಿದೆ.
ತಲೆಮರೆಸಿಕೊಂಡಿರುವ ಇಬ್ಬರು ಐಎಂ ಉಗ್ರರು ಸ್ಫೋಟಕ್ಕೆ ಸಂಚು ರೂಪಿಸಿದ್ದು, ದೇಶದಲ್ಲಿ ಯಾವುದೇ ಕ್ಷಣದಲ್ಲೂ ಉಗ್ರರು ಬಾಂಬ್ ಸ್ಫೋಟಿಸುವ ಸಾಧ್ಯತೆ ಇದೆ ಎಂದು ಎನ್‌ಐಎ ಎಚ್ಚರಿಕೆ ಸಂದೇಶ ರವಾನಿಸಿದೆ.
ತಲೆಮರೆಸಿಕೊಂಡಿರುವ ಉಗ್ರರನ್ನು ತಹಸೀನ್ ಅಖ್ತರ್ ಮತ್ತು ವಖಾಸ್ ಎಂದು ಗುರುತಿಸಲಾಗಿದ್ದು, ಹೈದರಾಬಾದ್‌ನ ದಿಲ್‌ಸುಖ್ ನಗರದಲ್ಲಿ ನಡೆದ ಅವಳಿ ಸ್ಫೋಟದಲ್ಲಿ ಈ ಇಬ್ಬರು ಉಗ್ರರು ಭಾಗಿಯಾಗಿದ್ದರು ಎಂದು ಎನ್‌ಐಎ ಹೇಳಿದೆ. ಅಲ್ಲದೆ ಈ ಇಬ್ಬರು ಉಗ್ರರು ಪ್ರವಾಸಿಗರ ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ತಮ್ಮ ದಾಳಿಗೆ ಸ್ಥಳಗಳನ್ನು ಗುರುತಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಎನ್‌ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇವರಿಬ್ಬರ ಬಗ್ಗೆ ಜಾಗ್ರತೆ ವಹಿಸುವಂತೆ ಕೇಳಿಕೊಂಡಿರುವ ಎನ್‌ಐಎ ಅಧಿಕಾರಿಗಳು, ಅವರ ಚಲನವಲನಗಳ ಬಗ್ಗೆ ಮಾಹಿತಿ ಸಿಕ್ಕರೆ ತಕ್ಷಣ ತಮ್ಮ ಗಮನಕ್ಕೆ ತರುವಂತೆ ಸಾರ್ವಜನಿಕರಲ್ಲಿ ಕೋರಿಕೊಂಡಿದ್ದಾರೆ. ಈ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಸಹ ಎನ್‌ಐಎ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

