ತುಳಸಿ ನಕಲಿ ಎನ್‌ಕೌಂಟರ್ ಪ್ರಕರಣ: ಬಿಜೆಪಿ ನಾಯಕರ ವಿಚಾರಣೆ ಸಾಧ್ಯತೆ
ನವದೆಹಲಿ: 2006ರಲ್ಲಿ ನಡೆದ ತುಳಸಿ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕರನ್ನು ಕೇಂದ್ರ ತನಿಖಾ ದಳ(ಸಿಬಿಐ) ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.
ಬಿಜೆಪಿ ನಾಯಕರಾದ ಪ್ರಕಾಶ್ ಜಾವೇದ್‌ಕರ್, ಭೂಪೇಂದ್ರ ಯಾದವ್, ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತುಳಸಿ ಪ್ರಜಾಪತಿ ಅವರ ತಾಯಿಯ ಮೇಲೆ ಪ್ರಭಾವ ಬೀರಲು ಈ ಮೂವರು ನಾಯಕರು ಯತ್ನಿಸಿದ್ದಾರೆ ಎಂಬುದು ಸಿಬಿಐ ನಡೆಸಿದ ಕುಟುಕು ಕಾರ್ಯಾಚರಣೆಯಿಂದ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಈ ಮೂವರು ನಾಯಕರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಎಂದು ತಿಳಿದು ಬಂದಿದೆ.
ಆರೋಪವನ್ನು ತಳ್ಳಿ ಹಾಕಿರುವ ಈ ಮೂವರು ನಾಯಕರು, ನಮ್ಮ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಮಾಡಲಾಗುತ್ತಿದೆ. ನಾವು ಪ್ರಜಾಪತಿ ತಾಯಿ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿಲ್ಲ. ನಮ್ಮ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಸಿಬಿಐಗೆ ದೊರಕಿರುವ ಸಿಡಿಗೆ ಸಂಬಂಧಪಟ್ಟಂತೆ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರಿಸಲು ಸಿದ್ಧನಿದ್ದೇನೆ ಎಂದು ಜಾವೇದಕರ್ ಹೇಳಿದ್ದಾರೆ.
ನಮ್ಮ ಮಗ ತುಳಸಿ ಪ್ರಜಾಪತಿಯನ್ನು ನಕಲಿ ಎನ್‌ಕೌಂಟರ್ ಮಾಡಲಾಗಿದೆ ಎಂದು ಪ್ರಜಾಪತಿ ತಾಯಿ ನರ್ಮದಾ ಬಾಯ್ ಅವರು ಕೇಸು ದಾಖಲಿಸಿದ್ದರು.
ತುಳಸಿ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಿಂಗ್ ಆಪರೇಷನ್ ನಡೆಸಿದ ವಿಡಿಯೋ ಚಿತ್ರಣವನ್ನು ಸಿಡಿ ರೂಪದಲ್ಲಿ ಕಾಂಗ್ರೆಸ್ ಪ್ರಕಟಿಸಿತ್ತು.
2006ರ ಡಿಸೆಂಬರ್ 28ರಂದು ಪಾಲನ್‌ಪುರ್‌ನ ದಂತಾ ಪಟ್ಟಣ ಸಮೀಪದ ಚಾಪ್ರಿ ಗ್ರಾಮದಲ್ಲಿ ತುಳಸಿ ಪ್ರಜಾಪತಿ ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಪ್ರಕರಣದಲ್ಲಿ ಅನೇಕ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ದಾವೂದ್ ಇಬ್ರಾಹಿಂ ಜತೆ ನಿಕಟ ಸಂಬಂಧ ಹೊಂದಿದ್ದ ಸೊಹ್ರಾಬುದ್ದೀನ್ ಶೇಖ್ ಹಾಗೂ ಅವರ ಪತ್ನಿ ಕೌಸರ್ ಬಿ ಅವರ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿದ್ದ ತುಳಸಿ ರಾಮ್ ಪ್ರಜಾಪತಿ ಅವರನ್ನು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

