ಅಂಬಿ ಬಂದ್ರು... ಮಲೇಷ್ಯಾದಿಂದ ಮಂಡ್ಯದ ಗಂಡು ತವರಿಗೆ ವಾಪಸ್

ಬೆಂಗಳೂರು: ಸುದೀರ್ಘ 52 ದಿನಗಳ ನಂತರ ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರು ಶುಕ್ರವಾರ ಮಲೇಷ್ಯಾದಿಂದ ತವರಿಗೆ ಆಗಮಿಸಿದ್ದು, ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ನೂರಾರು ಅಭಿಮಾನಿಗಳಿಂದ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.
ಅಂಬರೀಷ್ ಅವರು ತಮ್ಮ ಪತ್ನಿ ಸುಮಲತಾ ಅವರೊಂದಿಗೆ ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಇಲ್ಲಿಂದ ನೇರವಾಗಿ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾರೆ. ಮಧ್ಯಾಹ್ನದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಸುಮಾರು ಒಂದು ತಿಂಗಳುಗಳ ಕಾಲ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ವಿಶ್ರಾಂತಿಗಾಗಿ ಅಂಬರೀಷ್ ಮಲೇಷ್ಯಾಗೆ ತೆರಳಿದ್ದರು.
ಏ.14ರಂದು ಮಂಡ್ಯಕ್ಕೆ ಅಂಬಿ
ಏಪ್ರಿಲ್ 14ರಂದು ಮಂಡ್ಯದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಘಟಕ ಆಯೋಜಿಸಿರುವ ಬೃಹತ್ ಬಹಿರಂಗ ಸಭೆಯಲ್ಲಿ ಅಂಬರೀಷ್ ಭಾಗವಹಿಸಲಿದ್ದಾರೆ.
ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಮಲೇಷ್ಯಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಂಬರೀಷ್, ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದಿತ್ತು. ಮಂಡ್ಯ ಜಿಲ್ಲಾ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಭಿನ್ನಮತ ಇದಕ್ಕೆ ಇನ್ನಷ್ಟು ತುಪ್ಪ ಸುರಿದಿತ್ತು. ಜತೆಗೆ ಅವರ ಕುಟುಂಬ ವರ್ಗ ಸಂಪೂರ್ಣ ಗುಣಮುಖರಾಗುವವರೆಗೆ ಪ್ರಚಾರಕ್ಕೆ ತೆರಳುವುದು ಬೇಡ ಎಂದು ಪಟ್ಟು ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಅಂಬರೀಷ್ ಚುನಾವಣಾ ಪ್ರಕ್ರಿಯೆ ಮುಗಿದ ನಂತರವೇ ಮರಳುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಮಾಡಿರುವ ಮನವಿಗೆ ಸ್ಪಂದಿಸಿರುವ ಅವರು ಏ. 14ರಂದು ನಡೆಯುವ ಬಹಿರಂಗ ಸಭೆಯಲ್ಲಿ ರಮ್ಯ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


