ಫಲಿತಾಂಶ ಏನೇ ಬರಲಿ, ಸಿಎಂ ಬದಲಾವಣೆ ಇಲ್ಲ: ಪರಮೇಶ್ವರ್

ಬೆಂಗಳೂರು: ಪ್ರಸ್ತುತ ಲೋಕಸಭಾ ಚುನಾವಣೆಯ ಸಂಬಂಧ ರಾಜ್ಯದಲ್ಲಿ ಫಲಿತಾಂಶ ಏನೇ ಬರಲಿ, ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನಗಳು ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಸೋಲು ಗೆಲುವಿನ ಹೊಣೆಯನ್ನು ನಾನು ಮತ್ತು ಸಿದ್ದರಾಮಯ್ಯ ಜಂಟಿಯಾಗಿ ಹೊರುತ್ತೇವೆ ಎಂದು ಹೇಳಿದ್ದಾರೆ.
ಚುನಾವಣೆಯ ಸೋಲು ಗೆಲುವಿಗೂ ಮುಖ್ಯಮಂತ್ರಿ ಬದಲಾವಣೆಗೂ ತಾಳೆ ಹಾಕುವುದು ಸರಿಯಲ್ಲ. ಇಂತಿಷ್ಟು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಹೈಕಮಾಂಡ್ ಯಾವುದೇ ಕಟ್ಟಪ್ಪಣೆ ಮಾಡಿಲ್ಲ ಆದರೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ರಯತ್ನಿಸಿ ಎಂದು ಸೂಚನೆ ಕೊಟ್ಟಿದ್ದರು. ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ, ನಾನು ರಾಜ್ಯದಾದ್ಯಂತ ಪ್ರವಾಸ ಮಾಡಿದಾಗ ಮತದಾರರಲ್ಲಿ ನಮ್ಮ ಪಕ್ಷದ ಪರ ಹೆಚ್ಚಿನ ಒಲವಿರುವುದು ಕಂಡುಬಂದಿತು ಎಂದರು.
ರಾಜ್ಯದಲ್ಲಿ ನಿನ್ನೆ ನಡೆದ ಮತದಾನದಲ್ಲಿ ಶೇಕಡಾವಾರು ಹೆಚ್ಚು ಮತದಾನ ಆಗಿರುವುದರಿಂದ ಅದು ನಮಗೆ ಅನುಕೂಲವಾಗಲಿದ್ದು, ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಿಗುವ ನಿರೀಕ್ಷೆ ಇದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. ಇನ್ನುಳಿದಂತೆ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ಮೈಸೂರು, ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿ ಮುಖ್ಯಮಂತ್ರಿ ಅವರಿಗೆ ಮುಖಭಂಗ ಮಾಡಬೇಕು ಎಂಬ ದುರುದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ದೂರಿದರು.
ಚುನಾವಣೆ ಪ್ರಚಾರ ವೇಳೆ, ನಾನಾಗಲಿ ಅಥವಾ ನಮ್ಮ ಪಕ್ಷದ ನಾಯಕರಾಗಲಿ ಬಾಯಿ ತಪ್ಪಿ ಯಾರಿಗಾದರೂ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಮಾತನಾಡಿದ್ದರೆ ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷದ ಪರವಾಗಿ ಅವರ ಕ್ಷಮೆ ಕೋರುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


