ಈಗಿನ ಸುದ್ದಿ

ಲೋಕಸಭೆ ಆಯ್ತು, ಈಗ ರಾಜ್ಯಸಭೆ ಚುನಾವಣೆಗೆ ಸಿದ್ಧತೆ

ಲೋಕಸಭೆ ಆಯ್ತು, ಈಗ ರಾಜ್ಯಸಭೆ ಚುನಾವಣೆಗೆ ಸಿದ್ಧತೆ
Published On :

ಬೆಂಗಳೂರು: ಕಳೆದ ವಾರವಷ್ಟೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ರಾಜ್ಯದ 435 ಅಭ್ಯರ್ಥಿಗಳ ಭವಿಷ್ಯವನ್ನು ಮತಯಂತ್ರದಲ್ಲಿ ಭದ್ರವಾಗಿಟ್ಟಿರುವ ಚುನಾವಣಾ ಆಯೋಗ ಈಗ ಮತ್ತೊಂದು ಮಿನಿ ಸಮರಕ್ಕೆ ಸಿದ್ಧತೆ ನಡೆಸುತ್ತಿದೆ.

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಎದುರಾಗಿದ್ದು, ಇದೇ ಜೂನ್‌ನಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಹಾಗೂ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ರಾಜ್ಯಸಭಾ ಸದಸ್ಯರಾದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ಬಿ.ಕೆ ಹರಿಪ್ರಸಾದ್ ಹಾಗೂ ಬಿಜೆಪಿ ಮುಖಂಡರಾದ ಪ್ರಭಾಕರ್ ಕೋರೆ ಮತ್ತು ವಿ.ರಮಾಜೋಯಿಸ್ ಸದಸ್ಯತ್ವದ ಅವಧಿ ಜೂನ್ 25ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ವಿಧಾನಸಭೆಯಲ್ಲಿ 122 ಸ್ಥಾನಗಳನ್ನು ಹೊಂದಿರುವ ಆಡಳಿತರೂಢ ಕಾಂಗ್ರೆಸ್ ಎರಡು ಸ್ಥಾನಗಳಲ್ಲಿ ಹಾಗೂ 46 ಸ್ಥಾನಗಳನ್ನು ಹೊಂದಿರುವ ಪ್ರತಿಪಕ್ಷ ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಪಡೆದುಕೊಳ್ಳಲಿದೆ. ಆದರೆ ನಾಲ್ಕನೆ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

ಇನ್ನು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸೇರಿದಂತೆ ಏಳು ಸದಸ್ಯರ ಸದಸ್ಯತ್ವ ಜೂನ್ 30ರಂದು ಅಂತ್ಯಗೊಳ್ಳಲಿದ್ದು, ಇದರಲ್ಲಿ ಬಿಜೆಪಿಯ ನಾಲ್ವರು, ಜೆಡಿಎಸ್‌ನ ಇಬ್ಬರು ಹಾಗೂ ಕಾಂಗ್ರೆಸ್‌ನ ಒಬ್ಬ ಸದಸ್ಯರು ಸೇರಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ ಇರುವ ಸಂಖ್ಯಾಬಲದ ಆಧಾರದ ಮೇಲೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಮತ್ತು ಬಿಜೆಪಿ ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಲಿವೆ. ಮತ್ತೊಂದು ಸ್ಥಾನಕ್ಕೆ ಪೈಪೋಟಿ ನಡೆಯಲಿದೆ.

ಆಗ್ನೇಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ವಿ.ಎಚ್.ಶಿವಯೋಗಿಸ್ವಾಮಿ ಅವರ ಅವಧಿ ಸಹ ಜೂನ್ 30ಕ್ಕೆ ಮುಗಿಯಲಿದೆ ಮತ್ತು ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಮೋಹನ್ ಲಿಂಬಿಕಾಯಿ ಅವರು ಈಗಾಗಲೇ ರಾಜಿನಾಮೆ ನೀಡಿದ್ದಾರೆ. ಅವರು ಅವಧಿ ಜೂನ್ 30ರ ವರೆಗೆ ಇತ್ತು. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್‌ನ ಪುಟ್ಟಣ್ಣ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಶೀಲ್ ನಮೋಶಿ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ನಾಲ್ಕು ಕ್ಷೇತ್ರ ಸೇರಿದಂತೆ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಹಾಗೂ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ನಲ್ಲಿ ಚುನಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲಿ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

2013ರ ವಿಧಾಸಭೆ ಚುನಾವಣೆ ವೇಳೆ ಬಿಜೆಪಿಗೆ ರಾಜಿನಾಮೆ ನೀಡಿ, ಕೆಜೆಪಿ ಸೇರಿದ್ದ ಮೋಹನ್ ಲಿಂಬಿಕಾಯಿ ಹಾಗೂ ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶಶೀಲ್ ನಮೋಶಿ ಅವರು ಈಗ ಮತ್ತೆ ಬಿಜೆಪಿ ಸೇರಿದ್ದು, ಈ ಇಬ್ಬರು ಮತ್ತೆ ಬಿಜೆಪಿಯಿಂದ ಸ್ಪರ್ಧಿಸಲು ಯತ್ನಿಸುತ್ತಿದ್ದಾರೆ. ಇನ್ನು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರ ಪುತ್ರ ವಸಂತ್ ಹೊರಟ್ಟಿ ಅವರು ಈ ಬಾರಿ ಜೆಡಿಎಸ್‌ನಿಂದ ಪರಿಷತ್ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.