ಈಗಿನ ಸುದ್ದಿ

ಕೆಎಎಸ್ ಪರೀಕ್ಷೆ: 2011ನೇ ಸಾಲಿನ ಆಯ್ಕೆ ಪಟ್ಟಿ ರದ್ದು

ಕೆಎಎಸ್ ಪರೀಕ್ಷೆ: 2011ನೇ ಸಾಲಿನ ಆಯ್ಕೆ ಪಟ್ಟಿ ರದ್ದು
Published On :

ಬೆಂಗಳೂರು: ಸರ್ಕಾರದ ವಿರೋಧದ ನಡುವೆಯೂ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದ್ದ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ.

2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ ಮರುಪರೀಕ್ಷೆಗೆ ಆದೇಶಿಸಿದೆ.

ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು, 2011ರಲ್ಲಿ ಗೆಜೆಟೆಡ್ ಪ್ರೋಬೆಶನರಿ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದೆ. ಅಲ್ಲದೆ 2011ರಲ್ಲಿ ಅರ್ಜಿ ಹಾಕಿದ್ದ 362 ಅಭ್ಯರ್ಥಿಗಳಿಗೂ ಮರುಪರೀಕ್ಷೆ ನಡೆಸಲು ಸಂಪುಟ ತೀರ್ಮಾನಿಸಿದೆ.

2011ನೇ ಸಾಲಿನಲ್ಲಿ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರ ಬಗ್ಗೆ ತನಿಖೆ ನಡೆಸಿದ ಸಿಐಡಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿತು. ವರದಿಯಲ್ಲಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸಿಐಡಿ ಹೇಳಿತ್ತು. ಈ ವರದಿಯನ್ವಯ ರಾಜ್ಯ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು, ಪರೀಕ್ಷಾ ಪದ್ದತಿಯೇ ಸರಿಯಿಲ್ಲ ಮತ್ತು ಮುಖ್ಯ ಪರೀಕ್ಷೆಯಲ್ಲಿಯೇ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ ಎಂದು ಸಿಐಡಿ ವರದಿ ನೀಡಿದೆ. ಹೀಗಾಗಿ ನಾವು ಎಲ್ಲ ರೀತಿಯ ಚರ್ಚೆ ಮಾಡಿ, ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದರು.

ಆತ್ಮಹತ್ಯೆಗೆ ಯತ್ನಿಸಿದ  ನೊಂದ ಅಭ್ಯರ್ಥಿಗಳು
2011ರ ಸಾಲಿನ ಕೆಪಿಎಸ್‌ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ತೀರ್ಮಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನೊಂದ ಅಭ್ಯರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಫ್ರೀಡಂಪಾರ್ಕ್‌ನಲ್ಲಿ ನಡೆದಿದೆ.

ಕಳೆದ ಎರಡು ವಾರಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ನೊಂದ ಅಭ್ಯರ್ಥಿಗಳು ಸರ್ಕಾರದ ಆದೇಶ ಹೊರಬರುತ್ತಿದಂತೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಕೆಪಿಎಸ್‌ಸಿ ನೇಮಕಾತಿಯನ್ನು ರದ್ದುಗೊಳಿಸಬಾರದು ಎಂದು ಅಭ್ಯರ್ಥಿಗಳು ಸುದೀರ್ಘ ಹೋರಾಟ ನಡೆಸುತ್ತಿದ್ದರು. ನಮ್ಮ ಅಹವಾಲು ಆಳಿಸದೇ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ನೊಂದ ಅಭ್ಯರ್ಥಿಗಳು ತಮಗೆ ನ್ಯಾಯಾ ಸಿಗುವವರೆಗೂ ಕಾನೂನು ಹೋರಾಟ ನಡೆಸುವುದಾಗಿ ಹೇಳುತ್ತಿದ್ದಾರೆ. ಕೆಪಿಎಸ್‌ಸಿ ಅಕ್ರಮದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಕಿತ್ತು ಹಾಕುವುದನ್ನು ಬಿಟ್ಟು ನ್ಯಾಯ ಸಮ್ಮತವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾಕೆ ಶಿಕ್ಷೆ ಎಂದು ನೊಂದ ಅಭ್ಯರ್ಥಿಗಳ ಪ್ರಶ್ನೆಯಾಗಿದೆ.

ಸರ್ಕಾರದ ತೀರ್ಮಾನಕ್ಕೆ ಹೆಚ್‌ಡಿಕೆ ವಿರೋಧ
2011ರ ಸಾಲಿನ ಕೆಪಿಎಸ್‌ಸಿ ನೇಮಕಾತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

362 ಅಭ್ಯರ್ಥಿಗಳ ಆಯ್ಕೆ ರದ್ದು ಮಾಡಿ ಸರ್ಕಾರ ದೊಡ್ಡ ಪ್ರಮಾದ ಮಾಡಿದೆ. ನೇಮಕಾತಿ ರದ್ದುಗೊಳಿಸಿ ಹಳ್ಳಿಗಳಿಂದ ಬೆಳೆದು ಬಂದ ಅಭ್ಯರ್ಥಿಗಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದೆ ಎಂದರು.

ಕಾಣದ ಕೈಗಳ ಶಕ್ತಿಗೆ ಮಣಿದು ಸರ್ಕಾರ ಏಕಾಏಕಿ ನೇಮಕಾತಿಯನ್ನು ರದ್ದುಪಡಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.