ಅಧಿಕಾರಿಯ ಮೇಲೆ ಹಲ್ಲೆ: ಮತ್ತೊಂದು ವಿವಾದದಲ್ಲಿ 'ಆಪ್'

ನವದೆಹಲಿ: ಕಟ್ಟಡ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ದೆಹಲಿಯ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಅವರು ಮತ್ತೊಂದು ವಿವಾದಲ್ಲಿ ಸಿಲುಕಿದ್ದು, ತಮ್ಮ ಕಾರ್ಯಕರ್ತರ ಮೂಲಕ ಸರ್ಕಾರಿ ಅಧಿಕಾರಿಯೊಬ್ಬರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ದಕ್ಷಿಣ ದೆಹಲಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದೆ ಎನ್ನಲಾಗುತ್ತಿದ್ದ ಕಟ್ಟಡದ ತೆರವು ಕಾರ್ಯಾಚರಣೆಗಾಗಿ ಮುಂದಾಗಿದ್ದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ಧ ಇಂದು ಆಮ್ ಆದ್ಮಿ ಪಕ್ಷದ ಮುಖಂಡ ಸೋಮನಾಥ್ ಭಾರ್ತಿ ಮತ್ತು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆಲವರ ಗುಂಪು ಏಕಾಏಕಿ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ತೀವ್ರವಾಗಿ ಥಳಿಸಿದರು. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡು ಪೊಲೀಸರ ಮಧ್ಯಪ್ರವೇಶದಿಂದಾಗಿ ಪರಿಸ್ಥಿತಿ ತಿಳಿಗೊಂಡಿತು.
ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೋಮನಾಥ್ ಭಾರ್ತಿ ಮತ್ತು ಅವರ ಬೆಂಬಲಿಗರು ವಿರುದ್ಧ ದೂರು ದಾಖಲಾಗಿದೆ. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ಸೋಮನಾಥ್ ಭಾರ್ತಿ ಅವರು, 'ಕಾರ್ಯಕರ್ತರ ಸೋಗಿನಲ್ಲಿದ್ದ ದುಷ್ಕರ್ಮಿಗಳು ಈ ಕೆಲಸ ಮಾಡಿದ್ದಾರೆ. ಅಧಿಕಾರಿಯನ್ನು ಥಳಿಸಿದ ಯಾರೊಬ್ಬರು ತಮ್ಮ ಕಾರ್ಯಕರ್ತರಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ ಮುನ್ಸಿಪಲ್ ಕಾರ್ಪೋರೇಶನ್ ಕ್ರಮವನ್ನು ಖಂಡಿಸಿರುವ ಅವರು, 'ಏಕಾಏಕಿ ಕಟ್ಟಡವನ್ನು ತೆರವು ಗೊಳಿಸುವುದು ಸಮಂಜಸವಲ್ಲ. ಈ ಬಗ್ಗೆ ಕಾರ್ಪೊರೇಷನ್ ಒಂದು ಸರ್ವೇ ನಡೆಸಿ, ನೋಟಿಸ್ ಜಾರಿ ಮಾಡಿ ನಂತರ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕು' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


