ಉಭಯ ಸದನಗಳಲ್ಲಿ ಮಾರ್ಧನಿಸಿದ 'ಅತ್ಯಾಚಾರ'; ನಿದ್ದೆಗೆ ಜಾರಿದ್ದ ಸಿಎಂ ಸಿದ್ದು...!

ಬೆಂಗಳೂರು: ರಾಜ್ಯಾದ್ಯಂತ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಹಿನ್ನಲೆಯಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ಧ ಚಾಟಿ ಬೀಸುತ್ತಿದ್ದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲೇ ಸುಖ ನಿದ್ರೆಗೆ ಜಾರಿದ್ದರು.
ಫ್ರೇಜರ್‌ಟೌನ್ ಅತ್ಯಾಚಾರ ಪ್ರಕರಣ, ವಿಬ್‌ಗಯಾರ್ ಶಾಲಾ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕ್ರಿಶ್ಚಿಯನ್ ಸೆಮಿನರಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಮುಂದಿಟ್ಟುಕೊಂಡು ಇಂದು ವಿಪಕ್ಷಗಳು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡವು. ಪ್ರಮುಖವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಆರೋಪಿಸಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಜಾರ್ಜ್ ಅವರ ರಾಜಿನಾಮೆಗೆ ಒತ್ತಾಯಿಸಿದರು. ಇದು ಉಭಯ ನಾಯಕರ ಮಾತಿನ ಚಕಮಕಿಗೆ ಕಾರಣವಾಗಿತ್ತು. ಈ ವೇಳೆ ಸದನದಲ್ಲಿ ಕೊಂಚ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ನಿದ್ದೆಗೆ ಜಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
ಇನ್ನು ಸದನದಲ್ಲಿ ಅತ್ಯಾಚಾರದತಂಹ ಗಂಭೀರ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದ್ದರೆ ಅತ್ತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕುರ್ಚಿಯಲ್ಲಿಯೇ ನಿದ್ದೆಗೆ ಜಾರಿದ್ದರು. ಸಿದ್ದರಾಮಯ್ಯ ಅವರ ಈ ನಡವಳಿಕೆ ವಿರುದ್ಧ ಪ್ರತಿಪಕ್ಷದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಸಿಎಂ ಸಿದ್ದು-ಬೋಪಯ್ಯ ಮಾತಿನ ಚಕಮಕಿ
ಇದೇ ವೇಳೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಮಾಜಿ ಸ್ಪೀಕರ್ ಕೆ.ಜೆ.ಬೋಪಯ್ಯ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಹರಿಹಾಯ್ದರು.
ಸದನದಲ್ಲಿ ಬ್ಲೂಫಿಲಂ ನೋಡಿದವರು, ಸ್ನೇಹಿತನ ಹೆಂಡತಿಯ ಮೇಲೆಯೇ ಅತ್ಯಾಚಾರ ನಡೆಸಿದವರು ಮತ್ತು ಹೆಂಡಿತಿಯನ್ನೇ ಕೊಂದ ಆರೋಪ ಹೊತ್ತವರು ನಿಮ್ಮ ಪಕ್ಷದಲ್ಲಿದ್ದಾರೆ. ಹೀಗಿರುವಾಗ ನಮ್ಮ ಮೇಲೆ ಆರೋಪ ಹೊರಿಸಲು ನಿಮಗಾವ ನೈತಿಕತೆ ಇದೆ. ನೀವು ಸ್ಪೀಕರ್ ಆಗಿದ್ದಾಗ ಸದನದಲ್ಲಿ ಬ್ಲೂ ಫಿಲಂ ನೋಡಿದವರ ವಿರುದ್ಧ ಯಾವ ಕ್ರಮ ಕೈಗೊಂಡಿರಿ ಎಂದು ಪ್ರಶ್ನಿಸಿದರು. ಈ ವೇಳೆ ಆಡಳಿತ ಸದಸ್ಯರು ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ಬಿಜೆಪಿ ಸದಸ್ಯರ ಪ್ರತಿಭಟನೆ
ಇನ್ನು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಪಕ್ಷದ ಶಾಸಕ ಮತ್ತು ಪರಿಷತ್ ಸದಸ್ಯರು ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಸೇರಿದ್ದ ಬಿಜೆಪಿ ಸದಸ್ಯರು ಕಪ್ಪುಪಟ್ಟಿ ಧರಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದರು.
ಅತ್ಯಾಚಾರಿಗಳಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ ಸದಸ್ಯರು, ಅದೇ ಕಪ್ಪುಪಟ್ಟಿಯನ್ನು ಧರಿಸಿ ಉಭಯ ಕಲಾಪಗಳಲ್ಲಿ ಭಾಗವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


