ಗುಲ್ಬರ್ಗದಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಬೆಂಗಳೂರು ಹೊರವಲಯದ ವಿಬ್ಗಯಾರ್ ಶಾಲೆಯ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹಸಿರಾಗಿರುವಾಗಲೇ ಗುಲ್ಬರ್ಗಾದಲ್ಲಿ ಅಂತಹುದೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಗುಲ್ಬರ್ಗಾ ಜೇವರ್ಗಿ ಪಟ್ಟಣದ ಕಾಸರಗೋಸ್ಕಾ ಗ್ರಾಮದಲ್ಲಿ ಮನೆಯ ಆವರಣದಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಮೇಲೆ ಸುಮಾರು 48 ವರ್ಷದ ಮೆಹಬೂಬ್ ಪಾಟೀಲ್ ಎಂಬುವವನು ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಗುವನ್ನು ಪಕ್ಕದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಸ್ಥಳಕ್ಕಾಗಮಿಸಿದ ಮಗುವಿನ ಅಜ್ಜಿ ತಾರಾಬಾಯಿ ಅವರು ಮೆಹಬೂಬ್ಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಜ್ಜಿಯ ಕಾಲು ಹಿಡಿದ ದುಷ್ಕರ್ಮಿ ಮೆಹಬೂಬ್ ಪಾಟೀಲ್, ತನ್ನಿಂದ ತಪ್ಪಾಯಿತು ತನ್ನನ್ನು ಕ್ಷಮಿಸುವಂತೆ ಗೋಗರೆದಿದ್ದಾನೆ. ನಂತರ ಅಲ್ಲಿಂದ ಕಾಲ್ಕಿತ್ತಿದ್ದಾನೆ. ನಂತರ ತಮ್ಮ ಅಳಿಯನೊಂದಿಗೆ ಸೇರಿ ಅಜ್ಜಿ ತಾರಾಬಾಯಿ ಅವರು ಜೇವರ್ಗಿಯ ನೆಲೋಗಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಅತ್ಯಾಚಾರಿ ಮೆಹಬೂಬ್ ಪಟೇಲ್ ಬಂಧನ
ಇದೇ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ನಾಪತ್ತೆಯಾಗಿದ್ದ ಅತ್ಯಾಚಾರಿ ಮೆಹಬೂಬ್ ಪಟೇಲ್ನನ್ನು ಜೇವರ್ಗಿ ಪೊಲೀಸರು ಇಂದು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಎಸಿಪಿ ಅಮಿತ್ ಸಿಂಗ್ ಅವರು ಮೆಹಬೂಬ್ ಪಟೇಲ್ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಇಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಮೆಹಬೂಬ್ ಪಟೇಲ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯಾದ್ಯಂತ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು
ಇದೇ ವೇಳೆ ಅತ್ಯಾಚಾರ ಪ್ರಕರಣಗಳ ಕುರಿತ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಸಾರಗೊಳ್ಳುತ್ತಿರುವಂತೆಯೇ ರಾಜ್ಯಾದ್ಯಂತ ಮತ್ತಷ್ಟು ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಂಗಳೂರು ಹೊರವಲಯದ ರಾಮನಗರ ಜಿಲ್ಲೆಯಲ್ಲಿ ಐವರು ಕಾಮುಕರು ಶಿಕ್ಷಕಿ ಮೇಲೆ ಅತ್ಯಾಚಾರ ಯತ್ನ ನಡೆಸಿದ್ದಾರೆ. ಈ ವೇಳೆ ಶಿಕ್ಷಕಿ ಕೂಗಿಕೊಂಡಿದ್ದರಿಂದ ಶಿಕ್ಷಕಿಯನ್ನು ಅಲ್ಲಿಯೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಲೈಂಗಿಕ ಕಿರುಕುಳಕ್ಕೆ ಒಳಗಾದ ಶಿಕ್ಷಕಿ ಕನಕಪುರದಲ್ಲಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಕೆಲ ಯುವಕರು ಶಿಕ್ಷಕಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದರು. ಅಲ್ಲದೆ ಇಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಶಿಕ್ಷಕಿಯನ್ನು ಕಾರಿನ ಒಳಗೆ ಸೆಳೆಯಲು ಯತ್ನಿಸಿದ್ದಾರೆ. ಈ ವೇಳೆ ಶಿಕ್ಷಕಿ ಕೂಗಿಕೊಂಡಿದ್ದರಿಂದ ಶಿಕ್ಷಕಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಪ್ರಕರಣ ಸಂಬಂಧ ಇದೀಗ ರಾಮನಗರ ಪೊಲೀಸ್ ಠಾಣೆಯಲ್ಲಿ ಶಿಕ್ಷಕಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯಾದ್ಯಂತ ಮುಂದುವರೆದ ಪ್ರತಿಭಟನೆ
ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣಗಳ ವಿರುದ್ಧ ರಾಜ್ಯಾದ್ಯಂತ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ. ಎಬಿವಿಪಿ, ಎಸ್ಎಫ್ಐ ನಂತಹ ವಿದ್ಯಾರ್ಥಿ ಸಂಘಟನೆಗಳು ಮತ್ತು ವಿವಿಧ ಮಹಿಳಾ ಸಂಘಟನೆಗಳು ಪ್ರಮುಖ ವೃತ್ತಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೋಲಾರ, ಮೈಸೂರು. ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


