ಪ್ರತಿ ಅಪರಾಧ ಕೃತ್ಯವನ್ನು ಪರಿಶೀಲಿಸಲು ಸಾಧ್ಯವಿಲ್ಲ: ಮುಲಾಯಂ

ಲಖನೌ: ರಾಜ್ಯದಲ್ಲಿ ನಡೆಯುವ ಪ್ರತಿಯೊಂದು ಅಪರಾಧ ಕೃತ್ಯಗಳನ್ನು ಸರ್ಕಾರವೇ ಖುದ್ದು ಪರಿಶೀಲನೆ ಮಾಡಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ಮುಖಂಡ ಮತ್ತು ಸಂಸದ ಮುಲಾಯಂ ಸಿಂಗ್ ಯಾದವ್ ಅವರು ಹೇಳಿದ್ದಾರೆ.
ಲಖನೌನಲ್ಲಿ ನಡೆದ ಮಹಿಳೆಯ 'ಹತ್ಯಾಚಾರ' ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ವ್ಯಾಪಕ ಟೀಕಾ ಪ್ರಹಾರಗಳೇ ಹರಿದು ಬರುತ್ತಿರುವ ಹಿನ್ನಲೆಯಲ್ಲಿ ತಮ್ಮ ಮಗನ ಬೆನ್ನಿಗೆ ನಿಂತಿರುವ ಮುಲಾಯಂ ಸಿಂಗ್ ಯಾದವ್ ಅವರು, 'ರಾಜ್ಯದಲ್ಲಿ ಸುಮಾರು 21 ಕೋಟಿ ಜನಸಂಖ್ಯೆ ಇದ್ದು, ಉತ್ತರ ಪ್ರದೇಶದಲ್ಲಿ ನಡೆಯುವ ಪ್ರತಿಯೊಂದು ಅಪರಾಧ ಕೃತ್ಯಗಳನ್ನು ರಾಜ್ಯ ಸರ್ಕಾರವೇ ಪರಿಶೀಲನೆ ಮಾಡಲು ಸಾಧ್ಯವಿಲ್ಲ' ಎಂದು ಹೇಳಿದರು.
ಅಲ್ಲದೆ 'ಪ್ರತಿಪಕ್ಷಗಳು ಸುಖಾಸುಮ್ಮನೆ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದು, ಪ್ರಚಾರಕ್ಕಾಗಿ ಸಮಾಜವಾದಿ ಪಕ್ಷ ಮತ್ತು ಅಖಿಲೇಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಜನಸಂಖ್ಯೆಗೆ ಹೋಲಿಸಿದರೆ ರಾಜ್ಯದಲ್ಲಿನ ಅಪರಾಧ ಪ್ರಮಾಣ ಕಡಿಮೆಯೇ ಇದೆ' ಎಂದು ಹೇಳುವ ಮೂಲಕ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಮುಲಾಯಂ ಸಿಂಗ್ ಯಾದವ್ ಅವರ ಈ ಹೇಳಿಕೆಗೆ ಇದೀಗ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ರಾಜಕೀಯ ವಲಯದಲ್ಲಿ ಮುಲಾಯಂ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ಮತ್ತೋರ್ವ ಮುಖಂಡ ನರೇಶ್ ಅಗರ್ವಾಲ್ ಅವರು, ಉತ್ತರ ಪ್ರದೇಶದಂತೆಯೇ ಬೇರೆ ರಾಜ್ಯಗಳಲ್ಲಿಯೂ ಅಪರಾಧ ಕೃತ್ಯಗಳು ನಡೆಯುತ್ತವೆ. ಆದರೆ ಉತ್ತರ ಪ್ರದೇಶದ ಪ್ರಕರಣಗಳನ್ನು ಮಾತ್ರ ಮಾಧ್ಯಮಗಳು ಹೆಚ್ಚಾಗಿ ಪ್ರಕಟಿಸುತ್ತವೆ. ಇಂತಹುದೇ ಪ್ರಕರಣವೊಂದು ನಿನ್ನೆ ಕರ್ನಾಟಕದ ಬೆಂಗಳೂರಿನಲ್ಲಿಯೂ ನಡೆದಿದೆ. ಆದರೆ ಮಾಧ್ಯಮಗಳು ಆ ಬಗ್ಗೆ ಹೆಚ್ಚಿನ ಒತ್ತು ನೀಡಿಲ್ಲ ಎಂದು ಮಾಧ್ಯಮಗಳ ವಿರುದ್ಧವೇ ಹರಿಹಾಯ್ದರು.
ಅಖಿಲೇಶ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ
ಇತ್ತ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಮತ್ತು ಸಮಾಜದ ವಿವಿಧ ಮಹಿಳಾ ಸಂಘಟನೆಗಳು ನಿನ್ನೆಯಿಂದ ನಡೆಸುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದ್ದು, ಲಖನೌನಲ್ಲಿರುವ ಉತ್ತರ ಪ್ರದೇಶ ಸಚಿವಾಲಯದ ಹೊರಗಡೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ವಿಫಲವಾದ ವಿಶೇಷ ತನಿಖಾ ತಂಡ
ಇನ್ನು ಮಹಿಳೆ ಮೇಲಿನ 'ಹತ್ಯಾಚಾರ' ಮತ್ತು ಶಾಲೆಗೆ ನುಗ್ಗಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಈ ಹಿಂದೆ ರಚಿಸಲಾಗಿದ್ದ ನಾಲ್ಕು ವಿಶೇಷ ಪೊಲೀಸ್ ತಂಡ ತನಿಖೆಯಲ್ಲಿ ಪ್ರಗತಿ ಸಾಧಿಸುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರಕರಣ ನಡೆದು 2 ವಾರಗಳೇ ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಸಾಧಿಸದೇ ಇರುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.
ಒಟ್ಟಾರೆ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದ್ದರೂ, ಕ್ರಮ ಕೈಗೊಳ್ಳಬೇಕಾದ ಸರ್ಕಾರ ಮತ್ತು ಜನಪ್ರತಿನಿಧಿಗಳು ತಮ್ಮನ್ನು ತಾವು ಸಂರಕ್ಷಿಸಿಕೊಳ್ಳಲು ಯತ್ನಿಸುತ್ತಿದ್ದಾರೆಯೇ ಹೋರತು ಸಮಸ್ಯೆ ಬಗೆಹರಿಸಲು ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿಂದೆ ಬದನೌ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಇದೇ ಮುಲಾಯಂ ಸಿಂಗ್ ಯಾದವ್ ಅವರು ಮಕ್ಕಳು ತಪ್ಪುಮಾಡುವುದು ಸಹಜ. ಅವರನ್ನು ನೇಣಿಗೇರಿಸಬಾರದು ಎಂಬರ್ಥದಲ್ಲಿ ಮಾತನಾಡಿದ್ದರು. ಆ ಮೂಲಕ ಪರೋಕ್ಷವಾಗಿ ಅತ್ಯಾಚಾರಿಗಳ ಬೆಂಬಲಕ್ಕೆ ನಿಂತಿದ್ದರು. ಇಂತಹ ಜನಪ್ರತಿನಿಧಿಗಳಿಂದ ನಾವು ಸಾಮಾಜಿಕ ನ್ಯಾಯ ನಿರೀಕ್ಷಿಸಬಹುದೇ..? ಎಂಬುದು ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


