ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ: ಒಮರ್ ಅಬ್ದುಲ್ಲಾ

ಶ್ರೀನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಯುಪಿಎ ಮೈತ್ರಿಕೂಟದ ಅಂಗಪಕ್ಷವಾಗಿರುವ ನಾಷನಲ್ ಕಾನ್ಫರೆನ್ಸ್ ಪಕ್ಷ ಇದೀಗ ಕಾಂಗ್ರೆಸ್ ಮೈತ್ರಿಕೂಟದಿಂದ ಹೊರಬರುತ್ತಿದ್ದು, ಮೈತ್ರಿ ಕಡಿತಕ್ಕೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಸ್ವತಃ ಒಮರ್ ಅಬ್ದುಲ್ಲಾ ಅವರೇ ಟ್ವೀಟ್ ಮಾಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ನಾನು ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ ಕಳೆದ 10 ದಿನಗಳ ಹಿಂದೆಯೇ ಒಮರ್ ಅಬ್ದುಲ್ಲಾ ಅವರು ಮೈತ್ರಿ ಕಡಿತದ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿದ್ದು, ಮೈತ್ರಿ ಕಡಿತಕ್ಕೆ ಉಭಯ ಪಕ್ಷಗಳಲ್ಲಿನ ಭಿನ್ನಾಭಿಪ್ರಾಯಗಳೇ ಕಾರಣ ಎನ್ನಲಾಗುತ್ತಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಒಮರ್ ಅಬ್ದುಲ್ಲಾ ಅವರು, ಕಳೆದ 10 ದಿನಗಳ ಹಿಂದೆ ನಾನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿರುವುದು ನಿಜ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಮೈತ್ರಿ ಕಡಿತಕ್ಕೆ ಕಾರಣವಾದ ಅಂಶಗಳನ್ನು ನಾನು ಮಾಧ್ಯಮಗಳೊಂದಿಗೆ ಚರ್ಚಿಸಲು ಇಚ್ಛಿಸುವುದಿಲ್ಲ. ಏಕೆಂದರೆ ಪ್ರತಿಪಕ್ಷಗಳು ಇದನ್ನೇ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇರುವುದರಿಂದ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತೇವೆ: ಅಂಬಿಕಾ ಸೋನಿ
ಒಮರ್ ಅಬ್ದುಲ್ಲಾ ಅವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡೆ ಮತ್ತು ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಾಯಕಿ ಅಂಬಿಕಾ ಸೋನಿ ಅವರು ಮಾತನಾಡಿ ಕಣಿವೆ ರಾಜ್ಯದ ಎಲ್ಲ 87 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲ ಅಗತ್ಯವಿರುವ ಅಭ್ಯರ್ಥಿಗಳನ್ನು ಕೂಡ ಗಣನೆಗೆ ತೆಗೆದುಕೊಳ್ಳುತ್ತೇವೆ ಎಂದು ಅಂಬಿಕಾ ಸೋನಿ ಹೇಳಿದ್ದಾರೆ.
ಒಟ್ಟಾರೆ ಕಳೆದ 5 ವರ್ಷಗಳಿಂದ ಯುಪಿಎ ಮೈತ್ರಿಕೂಟದ ಭಾಗವಾಗಿದ್ದ ನ್ಯಾಷನಲ್ ಕಾಂಗ್ರೆಸ್ ಪಕ್ಷ ಇದೀಗ ತನ್ನ ಮೈತ್ರಿಯನ್ನು ಕಡಿದುಕೊಂಡಿದೆ. ಇದೇ ನವೆಂಬರ್ನಲ್ಲಿ ಕಣಿವೆ ರಾಜ್ಯದ 87 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಎನ್.ಸಿ.ಪಕ್ಷ ಪ್ರತ್ಯೇಕವಾಗಿ ಚುನಾವಣೆಯನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


