ಗದ್ದುಗೆ ಕಚ್ಚಾಟ: ಕೇಜ್ರಿವಾಲ್ರಿಂದ ಉಪರಾಷ್ಟ್ರಪತಿ ಭೇಟಿ

ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಉಪರಾಷ್ಟ್ರಪತಿ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.
ರಾಜ್ಯಪಾಲರ ನಿವಾಸಕ್ಕೆ ಆಗಮಿಸಿರುವ ಕೇಜ್ರಿವಾಲ್ ಅವರು ತಮ್ಮೊಂದಿಗೆ ಆಮ್ ಆದ್ಮಿ ಪಕ್ಷದ 26 ಶಾಸಕರನ್ನು ಕೂಡ ಕರೆತಂದಿದ್ದರು ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಬಳಿಕ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು, ಉಪರಾಜ್ಯಪಾಲರನ್ನು ಇಂದು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದೇನೆ. ರಾಜ್ಯಪಾಲರು ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೆ ಈ ಹಿಂದೆ ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಕೇಜ್ರಿವಾಲ್ ಅವರು, ಬಹುಮತವಿಲ್ಲದಿದ್ದರೂ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಇದೇ ವಿಚಾರವನ್ನು ನಾವು ಉಪರಾಜ್ಯಪಾಲರಿಗೆ ಮನದಟ್ಟು ಮಾಡಿದ್ದೇವೆ. ಉಪರಾಜ್ಯಪಾಲ ನಜೀಬ್ ಜಂಗ್ ಅವರು ಬಿಜೆಪಿ ನಾಯಕರನ್ನು ಕರೆಸಿ ಚರ್ಚಿಸುವುದಾಗಿ ಹೇಳಿದ್ದಾರೆ. ಇವಿಷ್ಟೇ ಅಲ್ಲದೆ ಬಿಜೆಪಿ ಸರ್ಕಾರ ರಚನೆಗಾಗಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗುವ ಅಪಾಯವಿದ್ದು, ಕೂಡಲೇ ವಿಧಾನಸಭೆಯನ್ನು ವಿಸರ್ಜಿಸುವಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ದೆಹಲಿ ಉಪರಾಜ್ಯಪಾಲ ನಜೀಬ್ ಜಂಗ್ ಅವರು ಬಿಜೆಪಿ ಪಕ್ಷಕ್ಕೆ ಸರ್ಕಾರ ರಚಿಸುವಂತೆ ಆಹ್ವಾನ ನೀಡಿದ ಬಳಿಕ ರಾಷ್ಟ್ರರಾಜಧಾನಿಯಲ್ಲಿ ರಾಜಕೀಯ ಚುಟುವಟಿಕೆಗಳು ತೀವ್ರಗೊಂಡಿದ್ದು, ಬಿಜೆಪಿ ಪಕ್ಷ ಅಧಿಕಾರ ರಚನೆಗೆ ಮುಂದಾಗಿತ್ತು. ಆದರೆ ಸಂಖ್ಯಾಬಲದ ಕೊರತೆ ಎದುರಿಸುತ್ತಿರುವ ಬಿಜೆಪಿ ಎತರೆ ಪಕ್ಷಗಳ ಬೆಂಬಲ ಕೋರಲು ಮುಂದಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ಮುಖಂಡರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ. ನಮ್ಮ ಪಕ್ಷದ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಕೇಜ್ರಿವಾಲ್ ಆರೋಪಕ್ಕೆ ಉತ್ತರಿಸಿದ್ದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು, ಬಿಜೆಪಿ ಶಾಸಕರ ಕುದುರೆ ವ್ಯಾಪರ ಮಾಡಿಲ್ಲ ಮತ್ತು ಭವಿಷ್ಯದಲ್ಲಿ ಮಾಡುವುದೂ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಲ್ಲದೆ ದೆಹಲಿ ಬಿಜೆಪಿ ಮುಖಂಡರನ್ನು ಕರೆಸಿ ಚರ್ಚೆ ನಡೆಸಿದ್ದರು. ಬಳಿಕ ಮಾಧ್ಯಮಗಳಲ್ಲಿ ಮಾತನಾಡಿದ್ದ ದೆಹಲಿ ಬಿಜೆಪಿ ಘಟಕ ತಾವು ಸರ್ಕಾರ ರಚನೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರ ರಚನೆಗೆ ಮುಂದಾಗದಂತೆ ಆರ್ಎಸ್ಎಸ್ ಸಲಹೆ ನೀಡಿದ್ದ ಬೆನ್ನಲ್ಲೇ ಬಿಜೆಪಿ ಈ ಘೋಷಣೆಯನ್ನು ಹೊರಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


