ಸಚಿವ ಸ್ಥಾನಕ್ಕೆ ನಾರಾಯಣ ರಾಣೆ ರಾಜಿನಾಮೆ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರ ಕೈಗಾರಿಕಾ ಸಚಿವ ನಾರಾಯಣ ರಾಣೆ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ಸಿಎಂ ಆಯ್ಕೆ ಕುರಿತಂತೆ ಪಕ್ಷದಲ್ಲಿದ್ದ ಗೊಂದಲದಿಂದಾಗಿ ಬೇಸತ್ತಿದ್ದ ರಾಣೆ, ಕಳೆದ ವಾರವಷ್ಟೇ ತಾವು ರಾಜಿನಾಮೆ ನೀಡುವುದಾಗಿ ಘೋಷಿಸಿದ್ದರು. ಅಲ್ಲದೆ ಈ ಕುರಿತಂತೆ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆಯನ್ನೂ ನಡೆಸಿದ್ದರು. ಆದರೆ ವರಿಷ್ಠರ ಮನವೊಲಿಕೆಗೆ ಮಣಿಯದ ರಾಣೆ ಅವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌವಾಣ್ ಅವರಿಗೆ ನಾರಾಯಣ ರಾಣೆ ಅವರು ತಮ್ಮ ರಾಜಿನಾಮೆ ಪತ್ರವನ್ನು ರವಾನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಬಂದಾಗಿನಿಂದಲೂ ನನ್ನ ಯಾವುದೇ ಕನಸುಗಳು ನನಸಾಗಿಲ್ಲ. ಸರ್ಕಾರದಲ್ಲಿ ನನ್ನ ಅಭಿಪ್ರಾಯಕ್ಕೆ ಯಾವುದೇ ಸ್ಥಾನವಿಲ್ಲ. ಸರ್ಕಾರದಿಂದ ನನಗೆ ಯಾವುದೇ ರೀತಿಯ ಬೆಂಬಲ ದೊರೆಯದೇ ಇರುವುದರಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ರಾಣೆ ಹೇಳಿದ್ದಾರೆ. ಆದರೆ ತಾವು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆಯುವುದಾಗಿಯೂ ರಾಣೆ ಸ್ಪಷ್ಟಪಡಿಸಿದ್ದಾರೆ.
ಮೂಲಗಳ ಪ್ರಕಾರ ರಾಣೆ ಪುತ್ರ ನೀಲೇಶ್ ರಾಣೆಯವರು ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸಿ 1.5 ಲಕ್ಷ ಮತಗಳಿಂದ ಹೀನಾಯವಾಗಿ ಸೋಲನ್ನು ಅನುಭವಿಸಿದ್ದರು. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಕೆಲವು ಅಭ್ಯರ್ಥಿಗಳು ರಾಣೆಯ ರಾಜಿನಾಮೆಗಾಗಿ ಒತ್ತಡ ಹೇರಿದ್ದರು ಎಂದು ತಿಳಿದು ಬಂದಿದೆ.
ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡು ತೀವ್ರ ಒತ್ತಡಕ್ಕೆ ಒಳಗಾಗಿದ್ದ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ರಾಜಿನಾಮೆ ಪಡೆಯಲು ಮುಂದಾಗಿತ್ತು. ಆ ಪಟ್ಟಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹ್ವಾಣ್ ಅವರು ಕೂಡ ಸೇರಿದ್ದರು. ಆದರೆ ಈ ಕುರಿತಂತೆ ಮಾಧ್ಯಮಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕಾಂಗ್ರೆಸ್ ಹೈಕಮಾಂಡ್ ತನ್ನ ನಿರ್ಧಾರದಿಂದ ಹಿಂದೆ ಸರಿದಿತ್ತು.
ಈ ಎಲ್ಲಾ ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವಂತೆಯೇ, ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಮಹಾರಾಷ್ಟ್ರ ಸಿಎಂ ಆಗಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದರು. ಇದು ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುವಂತೆ ಮಾಡಿತ್ತು. ಆದರೆ ಇದಕ್ಕೆ ಕೆಲ ಸಚಿವರು ಮತ್ತು ಶಾಸಕರು ವಿರೋಧ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲ ಸಚಿವರು ಬೆಂಬಲ ಸೂಚಿಸಿದ್ದರು.
ಒಟ್ಟಾರೆ ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರಾಜಕೀಯ ಕೆಸರೆರಚಾಟಕ್ಕೆ ರಾಣೆ ರಾಜಿನಾಮೆ ಪ್ರಕರಣ ಪ್ರಮುಖ ತಿರುವು ನೀಡಿದ್ದು, ಮುಂದಿನ ದಿನಗಳಲ್ಲಿ ಯಾವ ಹಾದಿ ಹಿಡಿಯಲಿದೆ ಎಂದು ಕಾದುನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


