ನಾಳೆಯಿಂದ ವಿಬ್ಗಯಾರ್ ಶಾಲೆ ಆರಂಭ: ಕಿಮ್ಮನೆ

ಬೆಂಗಳೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಿಂದ ಭಾರಿ ಸುದ್ದಿ ಮಾಡಿದ್ದ ಮಾರತಳ್ಳಿಯಲ್ಲಿರುವ ವಿಬ್ಗಯಾರ್ ಶಾಲೆ ನಾಳೆಯಿಂದ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮಂಗಳವಾರ ಹೇಳಿದ್ದಾರೆ.
ಬಾಲಕಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಕಳೆದ ಒಂದು ವಾರದಿಂದ ನಿರಂತರ ಪ್ರತಿಭಟನೆಗೆ ಕಾರಣವಾಗಿದ್ದ ವಿಬ್ಗಯಾರ್ ಶಾಲೆ ನಾಳೆ ಆರಂಭವಾಗಲಿದ್ದು, ಶಾಲೆಯ ಮುಂದೆ ಪ್ರತಿಭಟನೆ ನಡೆಸದಂತೆ ಪೋಷಕರಿಗೆ ಮತ್ತು ಸಂಘಟನೆಗಳಿಗೆ ಸಚಿವರು ಮನವಿ ಮಾಡಿದ್ದಾರೆ.
ಇಂದು ವಿಧಾಸೌಧದಲ್ಲಿ ವಿಬ್ಗಯಾರ್ ಶಾಲಾ ಆಡಳಿತ ಮಂಡಳಿ ಮತ್ತು ಪಾಲಕರೊಂದಿಗೆ ಸಭೆ ನಡೆಸಿದ ಕಿಮ್ಮನೆ ರತ್ನಾಕರ ಅವರು, ಸಭೆಯಲ್ಲಿ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಬುಧವಾರದಿಂದ ಶಾಲೆ ಆರಂಭಿಸುವ ನಿರ್ಣಯ ಕೈಗೊಂಡಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾಳೆಯಿಂದ ಶಾಲೆ ಆರಂಭಿಸುವ ಕುರಿತು ಪೋಷಕರ ಮತ್ತು ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಲಾಗಿದೆ. ನಾಳೆಯಿಂದ ಎಂದಿನಂತೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಪೋಷಕರು ಮತ್ತು ವಿವಿಧ ಸಂಘಟನೆಗಳು ಬುಧವಾರದಿಂದ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಮಾಡಬಾರದು ಎಂದು ಹೇಳಿದ ಸಚಿವರು, ಶಾಲೆಯ ಮಾನ್ಯತೆ ರದ್ದು ಮಾಡುವ ವಿಷಯದ ಕುರಿತು ಕೇಂದ್ರ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ ಎಂದು ತಿಳಿಸಿದರು. ಶಿಕ್ಷಣ ಇಲಾಖೆ ಮತ್ತು ಪೋಷಕರು ಶಾಲೆಯ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಶಿಕ್ಷಣ ಸಚಿವರು ಮಕ್ಕಳ ಶಿಕ್ಷಣದ ಹಿತದೃಷ್ಠಿಯಿಂದ ಶಾಲೆಯನ್ನು ಆರಂಭಮಾಡಲಾಗುತ್ತಿದೆ ಎಂದರು.
ಜು.17ರಂದು ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದ ನಂತರ ವಿಬ್ ಗಯಾರ್ ಶಾಲೆಯನ್ನು ಮುಚ್ಚಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


