ಈಗಿನ ಸುದ್ದಿ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
Published On :

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಸುಮಾರು 7 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪಾಸ್ತಿಯನ್ನು ಪತ್ತೆ ಮಾಡಿದ್ದಾರೆ.

ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಗುಲ್ಬರ್ಗಾ, ಯಾದಗಿರಿ, ರಾಯಚೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳ 23 ಪ್ರದೇಶಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಅಕ್ರಮವನ್ನು ಬಯಲಿಗೆಳೆದಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಕೇಶವ ಮೂರ್ತಿ ಅವರ ಬೆಂಗಳೂರಿನ ಬಸವೇಶ್ವರ ನಗರದಲ್ಲಿನ ನಿವಾಸ, ಅವರ ಸಂಬಂಧಿಕರ ನಿವಾಸ ಸೇರಿದಂತೆ ಒಟ್ಟು ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸುಮಾರು 2.86 ಕೋಟಿ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಜೂನಿಯರ್ ಕಾರ್ಯನಿರ್ವಾಹಕ ಎಂಜಿನಿಯರ್ ಇರ್ಷಾದ್ ಅಹಮದ್ ಅವರ ಬೆಳಗಾವಿ ನಿವಾಸ ಮತ್ತು ವರ್ಕ್ ಶಾಪ್, ವಾಣಿಜ್ಯ ಮಳಿಗೆಗಳು ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಪತ್ತೆಯಾದ 1.38 ಅಕ್ರಮ ಆಸ್ತಿಯ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ.

ಅಂತೆಯೇ ಯಾದಗಿರಿಯ ಶಹಾಪುರ ಪಟ್ಟಣದಲ್ಲಿರುವ ಪಂಚಾಯ್ತಿ ಜೂನಿಯರ್ ಎಂಜಿನಿಯರ್ ಸುಭಾಶ್ ಚಂದ್ರ ಶರ್ಮಾ ಅವರ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಹೇಶಪ್ಪ ಹನುಮೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಇನ್ನು ಕರ್ನಾಟಕ ಗೃಹಮಂಡಳಿಯ ಗುಲ್ಬರ್ಗಾ ಕಚೇರಿಯ ವ್ಯವಸ್ಥಾಪಕ ಶಿವಪುತ್ರಪ್ಪ ಅಳಬಾವಿ ಅವರ ನಿವಾಸ ಮತ್ತು ರಾಯಚೂರಿನಲ್ಲಿರುವ ಅವರ ಸಂಬಂಧಿಕರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುಲ್ಬರ್ಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಎಇಇ ಶರಣ ಬಸಪ್ಪ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸುಮಾರು 58 ಲಕ್ಷ ಮೌಲ್ಯದ ಅಕ್ರಮ ಆಸ್ಥಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಜೂನಿಯರ್ ಎಂಜಿನಿಯರ್ ಹಾಲೇಶಪ್ಪ ಅವರ ಚಿಕ್ಕಮಗಳೂರಿನ ವಿನೋಬಾ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಸುಮಾರು 64 ಲಕ್ಷ ಮೌಲ್ಯದ ಅಕ್ರಮ ಆಸ್ತಿಯನ್ನು ಬಯಲಿಗೆಳೆದಿದ್ದಾರೆ. ಹುಬ್ಬಳ್ಳಿಯಲ್ಲಿ ಹೂಡಾದ ವ್ಯವಸ್ಥಾಪಕ ಪರಮೇಶ್ವರಪ್ಪ ಅವರ ಮನೆ ಮೇಲೆ ದಾಳಿ ನಡೆಸಿ ಸುಮಾರು 72 ಲಕ್ಷ ಅಕ್ರಮ ಆಸ್ತಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಒಟ್ಟಾರೆ ನಿನ್ನೆ ಆರಂಭಗೊಂಡಿದ್ದ ಲೋಕಾಯುಕ್ತ ದಾಳಿ ಇಂದು ಕೂಡ ಮುಂದುವರೆದಿದ್ದು, ಇಂದು ರಾಜ್ಯದ 7 ಜಿಲ್ಲೆಗಳ 23 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ತಿಮಿಂಗಿಲಗಳ ಮುಖವಾಡವನ್ನು ಕಳಚಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.