ಈಗಿನ ಸುದ್ದಿ

ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ ವಿಚಾರ; ಬಿಜೆಪಿ ರಾಜಕೀಯ ದೆಹಲಿಗೆ ಶಿಫ್ಟ್

ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ ವಿಚಾರ; ಬಿಜೆಪಿ ರಾಜಕೀಯ ದೆಹಲಿಗೆ ಶಿಫ್ಟ್
Published On :

ಬೆಂಗಳೂರು: 8 ಕ್ಷೇತ್ರಗಳಿಗೆ ಬಿಜೆಪಿ ಅಭ್ಯಥಿಗಳ ಆಯ್ಕೆ ಮತ್ತಷ್ಟು ಕಗ್ಗಂಟಾಗಿರುವ ಕಾರಣ ಬಿಜೆಪಿ ರಾಜ್ಯ ನಾಯಕರು ಬುಧವಾರ ದೆಹಲಿಗೆ ತೆರಳಿ ಅಲ್ಲಿ ರಾಜ್‌ನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.

ತುಮಕೂರು ಕ್ಷೇತ್ರದಲ್ಲಿ ಬಸವರಾಜು ಅವರಿಗೆ ಟಿಕೆಟ್ ನೀಡಬೇಕೆಂದು ಯಡಿಯೂರಪ್ಪ ಪಟ್ಟು ಹಿಡಿದಿರುವುದು ಸೇರಿದಂತೆ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಬುಧವಾರ ಬೆಳಗ್ಗೆ  ಸೇರಿದ ಬಿಜೆಪಿ ಕೋರ್ ಕಮಿಟಿ ಸಭೆ ವಿಫಲಗೊಂಡಿದೆ. ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡದಿದ್ದರೆ  ತಾವು ಸಹ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಯಡಿಯೂರಪ್ಪ ಅವರು ಬೆದರಿಕೆ ಹಾಕುವ ಮೂಲಕ ಪಕ್ಷದ ಮುಖಂಡರ ಮೇಲೆ ಒತ್ತಡ ತಂತ್ರ ಹೇರುತ್ತಿದ್ದಾರೆ.

ಈ ಕಾರಣದಿಂದ ಬಿಜೆಪಿ ಅಧ್ಯಕ್ಷ ರಾಜ್‌ನಾಥ್ ಸಿಂಗ್ ಅವರು ರಾಜ್ಯ ನಾಯಕರನ್ನು ದೆಹಲಿಗೆ ಕರೆದಿದ್ದು, ಇಂದು ರಾತ್ರಿ 8 ಗಂಟೆ ರಾಜ್‌ನಾಥ್ ಸಿಂಗ್ ಜತೆಗೆ ಮಾತುಕತೆ ನಡೆಯಲಿದೆ.

ಚಿಕ್ಕಮಗಳೂರು ಉಡುಪಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬೇಕೆಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ. ಆದರೆ ಇದಕ್ಕೆ ಮಾಜಿ ಸಚಿವ ಹಾಗು ಸ್ಥಳೀಯ ಶಾಸಕ ಸಿ.ಟಿ ರವಿ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ರಾಜ್ಯ ಬಿಜೆಪಿ ಮುಖಂಡರು ಶೋಭಾ ಅವರಿಗೆ ಸಲಹೆ ಮಾಡಿದ್ದು, ಇದಕ್ಕೆ ಅವರು ಸಮ್ಮತಿ ಸೂಚಿಸಿಲ್ಲ.

ಬೀದರ್ ಕ್ಷೇತ್ರದಲ್ಲಿ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪುತ್ರ ಸೂರ್ಯಕಾಂತ್‌ಗೆ ಟಿಕೆಟ್ ನೀಡಬೇಕೆಂದು ಯಡಿಯೂರಪ್ಪ ಒತ್ತಡ ಹೇರುತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಮುಖಂಡರು ಸೂರ್ಯಕಾಂತ್ ಬದಲಿಗೆ ಗುರುಪಾದಪ್ಪ ಅವರಿಗೆ ಟಿಕೆಟ್ ನೀಡಲು ಒಲವು ತೋರಿದ್ದಾರೆ.

ಬಳ್ಳಾರಿ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗು ಬಿಎಸ್ಸಾರ್ ಕಾಂಗ್ರೆಸ್‌ನ ಅಧ್ಯಕ್ಷ ಬಿ.ಶ್ರೀರಾಮುಲು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರಿಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ಮುಖಂಡರು ತೀರ್ಮಾನಿಸಿದ್ದಾರೆ. ಆದರೆ ಇದಕ್ಕೆ ಪಕ್ಷದ ದೆಹಲಿ ಮುಖಂಡರು ಸಮ್ಮತಿ ಸೂಚಿಸಿಲ್ಲ. ಶ್ರೀರಾಮುಲು ನೇರವಾಗಿ ಬಿಜೆಪಿ ಸೇರುವುದು ಬೇಡ ಬದಲಿಗೆ ಅವರು ಎನ್‌ಡಿ ಎ ಅಂಗಪಕ್ಷವಾಗಿ ಬರಲಿ ಎಂಬುದು ದೆಹಲಿ ಮುಖಂಡರ ಸಲಹೆ. ಹೀಗಾಗಿ, ಈ ಕ್ಷೇತ್ರದಲ್ಲೂ ಗೊಂದಲ ಮುಂದುವರಿದಿದೆ.

ಕೋಲಾರ ಕ್ಷೇತ್ರದಲ್ಲಿ ಮಾಜಿ ಶಾಸಕ ಬೇತಮಂಗಲ ನಾರಾಯಣ ಸ್ವಾಮಿಗೆ ಟಿಕೆಟ್ ನೀಡಲು ಒಲವು ತೋರಿದ್ದಾರೆ. ಆದರೆ ವಿಧಾನ ಪರಿಷತ್ ಸದಸ್ಯ ಡಿ.ಎಸ್ ವೀರಯ್ಯ ಅವರು ತಮಗೆ ಟಿಕೆಟ್ ನೀಡಬೇಕೆಂದು ಪಟ್ಟು  ಹಿಡಿದಿದ್ದು ವೀರಯ್ಯ ಅವರಿಗೆ ಯಡಿಯೂರಪ್ಪ ಸಹ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.


ರಾಜ್ಯದ  28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಉಳಿದ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಮುಂದುವರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.