ಈಗಿನ ಸುದ್ದಿ

ಲೋಕಸಮರ: ಚಿಕ್ಕಬಳ್ಳಾಪುರದಲ್ಲಿ ಮೊಯಿಲಿ ವಿರುದ್ಧ ಎಚ್‌ಡಿಕೆ ಸ್ಪರ್ಧೆ

ಲೋಕಸಮರ: ಚಿಕ್ಕಬಳ್ಳಾಪುರದಲ್ಲಿ ಮೊಯಿಲಿ ವಿರುದ್ಧ ಎಚ್‌ಡಿಕೆ ಸ್ಪರ್ಧೆ
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣಾ ಆಖಾಡಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರ ವಿರುದ್ಧ ಎಚ್‌ಡಿಕೆ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಈ ಮೊದಲು ಮೊಯಿಲಿ ವಿರುದ್ಧ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದ ಕುಮಾರಸ್ವಾಮಿ, ಈಗ ಪತ್ನಿಯ ಬದಲಾಗಿ ತಾವೇ ಸ್ಪರ್ಧಿಸುವ ಆಸಕ್ತಿ ತೊರಿದ್ದಾರೆ ಎನ್ನಲಾಗಿದೆ. ಸತತ ಎರಡು ಬಾರಿ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಅನಿತಾ ಕುಮಾಸ್ವಾಮಿ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಆಸಕ್ತರಾಗಿಲ್ಲ. ಜತೆಗೆ ಆರೋಗ್ಯ ಸಮಸ್ಯೆಗಳು ಅವರನ್ನು ಕಾಡುತ್ತಿರುವುದರಿಂದ ಅವರು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಒಂದು ವೇಳೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸಿದ್ದೇಯಾದರೆ ಅವರ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ತಾವೇ ಕಣಕ್ಕಿಳಿಯುವುದಾಗಿ ಹೇಳಿದ್ದರು. ಆದರೆ ಕಾಂಗ್ರೆಸ್ ವೀರಪ್ಪ ಮೊಯಿಲಿ ಅವರಿಗೆ ಚಿಕ್ಕಬಳ್ಳಾಪುರ ಟಿಕೆಟಿ ನೀಡಿದ್ದು, ಅವರ ವಿರುದ್ಧವೇ ಎಚ್‌ಡಿಕೆ ಸ್ಪರ್ಧಿಸಲು ನಿರ್ಧರಿಸಿರುವುದರಿಂದ ಸಹಜವಾಗಿಯೇ ಚಿಕ್ಕಬಳ್ಳಾಪುರ ಕ್ಷೇತ್ರ ರಾಜಕೀಯವಾಗಿ ಮಹತ್ವ ಪಡೆಯಲಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಹಾಗೂ ಸಿಪಿಎಂ ಅಭ್ಯರ್ಥಿಯಾಗಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರು ಸ್ಪರ್ಧಿಸುತ್ತಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕುಮಾರಸ್ವಾಮಿ, ನಂತರ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅವರ ರಾಜಿನಾಮೆಯಿಂದ ತೆರವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸಿದ್ದರೂ ಕಾಂಗ್ರೆಸ್ ಎದುರು ಸೋಲು ಅನುಭವಿಸಬೇಕಾಯಿತು. ಪ್ರಸ್ತುತ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಇಂದಿನಷ್ಟು ರಾಜಕೀಯವಾಗಿ ಪ್ರಬಲವಾಗಿಲ್ಲದಿರುವುದರಿಂದ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದೇಯಾದರೆ, ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯಿಲಿ ಅವರು ಜೆಡಿಎಸ್ ಮತ್ತು ಬಿಜೆಪಿಯಿಂದ ಪ್ರಬಲ ಸ್ಪರ್ಧೆ ಎದುರಿಸಬೇಕಾಗುತ್ತದೆ. ಕಳೆದ ಬಾರಿ ಸುಲಭವಾಗಿ ಜಯ ಗಳಿಸಿ ಕೇಂದ್ರದಲ್ಲಿ ಸಚಿವರು ಆಗಿರುವ ಮೊಯಿಲಿ, ಈ ಬಾರಿ ಪ್ರತಿಪಕ್ಷಗಳಿಂದ ತೀವ್ರ ಪ್ರತಿಸ್ಪರ್ಧೆ, ಜತೆಗೆ ಕ್ಷೇತ್ರದಲ್ಲೂ ಸಾಕಷ್ಟು ವಿಚಾರಗಳಲ್ಲಿ ಪ್ರತಿರೋಧ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.