ಅಸ್ಸಾಂ ಹಿಂಸಾಚಾರಕ್ಕೆ ಮೋದಿ ಕಾರಣ

ಶ್ರೀನಗರ: ಅಸ್ಸಾಂನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೇ ಕಾರಣ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಅಸ್ಸಾಂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಒಮರ್ ಅಬ್ದುಲ್ಲಾ ಅವರು, ಹಿಂಸಾಚಾರಕ್ಕೆ ನರೇಂದ್ರ ಮೋದಿ ಅವರೇ ನೇರ ಕಾರಣ. ಇತ್ತೀಚೆಗೆ ಅವರು ಅಸ್ಸಾಂನಲ್ಲಿ ನಡೆಸಿದ ಪ್ರಚೋದನಾತ್ಮಕ ಭಾಷಣದಿಂದಾಗಿಯೇ ಅಸ್ಸಾಂನಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ಒಮರ್ ಆಬ್ದುಲ್ಲಾ ಆರೋಪಿಸಿದ್ದಾರೆ.
ಗಲಭೆ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ
ಇದೇ ವೇಳೆ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಕೇಂದ್ರದ ಯುಪಿಎ ಮತ್ತು ಅಸ್ಸಾಂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಟೀಕಿಸಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಅವರು, ಅಸ್ಸಾಂ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಗಲಭೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ.
ಪ್ರಧಾನಿ ಮನಮೋಹನ್ ಸಿಂಗ್ ಅವರು ಕಳೆದ 25 ವರ್ಷಗಳಿಂದ ಅಸ್ಸಾಂ ಅನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ಅವರು ಪ್ರಧಾನಿಯಾಗಿದ್ದಾರೆ. ಆದರೆ ಅಸ್ಸಾಂನಿಂದ ಆಯ್ಕೆಯಾದ ಪ್ರಧಾನಿ ಸಿಂಗ್ ಏನು ಮಾಡಿದ್ದಾರೆ. ಕನಿಷ್ಟ ಪಕ್ಷ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲೂ ಅವರಿಂದ ಸಾಧ್ಯವಾಗಿಲ್ಲ. ಬಾಂಗ್ಲಾದೇಶದಿಂದ ಭಾರತಕ್ಕೆ ಆಗಮಿಸುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಈ ಬಗ್ಗೆ ಸರ್ಕಾರ ಮಾತ್ರ ಯಾವುದೇ ಕ್ರಮಕೈಗೊಂಡಿಲ್ಲ.
ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ರಾಜ್ಯದಲ್ಲಿ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲಾಗಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಹೇಳಿದರು.
ಒಟ್ಟಾರೆ ಅಸ್ಸಾಂ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ ಕೂಡ ತೀವ್ರವಾಗುತ್ತಿದೆ. ಈ ನಡುವೆ ಅಸ್ಸಾಂ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೇರಿದ್ದು, ಬಾಕ್ಸಾ ಜಿಲ್ಲೆಯಲ್ಲಿ ಇಂದು ಮತ್ತೆ 9 ಮೃತದೇಹಗಳು ಪತ್ತೆಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


