ಅಮೇಥಿಯಿಂದಲೇ ಭಾರತ ನಿರ್ಮಾಣಕ್ಕೆ ಚಾಲನೆ: ನಮೋ

ಅಮೇಥಿ: ಅಮೇಥಿ ಕ್ಷೇತ್ರದಿಂದಲೇ ಭಾರತ ನಿರ್ಮಾಣ ಕಾರ್ಯವನ್ನು ಆರಂಭಿಸುತ್ತೇನೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಗಾಂಧಿ ಕುಟುಂಬದ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮತ್ತು ಪ್ರಸ್ತುತ ರಾಹುಲ್ ಗಾಂಧಿ ಅವರು ಪ್ರತಿನಿಧಿಸುತ್ತಿರುವ ಅಮೇಥಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಂಬರುವ ಎನ್ಡಿಎ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಅಮೇಥಿ ಕ್ಷೇತ್ರದಿಂದಲೇ ಪ್ರಾರಂಭಿಸುತ್ತೇನೆ ಎಂದು ಮೋದಿ ಹೇಳಿದರು.
ಅಮೇಥಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಖ್ಯಾತ ಕಿರುತೆರೆ ನಟಿ ಸ್ಮೃತಿ ಇರಾನಿ ಅವರನ್ನು ತಮ್ಮ ಸಹೋದರಿ ಎಂದು ಕರೆದ ನರೇಂದ್ರ ಮೋದಿ ಅವರು, ರಾಹುಲ್ಗೆ ತೊಂದರೆ ನೀಡಲು ನಾನು ನನ್ನ ತಂಗಿಯನ್ನು ಕಳುಹಿಸಿಲ್ಲ. ಆದರೆ ಇಲ್ಲಿನ ಜನತೆಗೆ ರಾಹುಲ್ ಅವರೇ ತೊಂದರೆಯಾಗಿ ಮಾರ್ಪಟ್ಟಿದ್ದು, ಜನತೆಯ ತೊಂದರೆ ನಿವಾರಣೆಗಾಗಿ ಆಕೆಯನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ಅಮ್ಮ ಮಗನ ನೀತಿಗಳಿಂದ ದೇಶದ ಯಾವೊಬ್ಬ ಪ್ರಜೆಯೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಪ್ರಸಕ್ತ ಲೋಕಸಭಾ ಚುನಾವಣೆ ಅಮೇಥಿ ಇತಿಹಾಸವನ್ನು ಬದಲಿಸಲಿದೆ ಎಂದು ನರೇಂದ್ರ ಮೋದಿ ಅವರು ಹೇಳಿದರು.
ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು, ಅಮೇಥಿಯಲ್ಲಿ ಕಳದೆ 10 ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿಯಾಗಿಲ್ಲ. ಕೇವಲ ರಾಜಕೀಯ ಪ್ರತಿಷ್ಟೆಗಾಗಿ ಅಮೇಥಿಯನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಅಮೇಥಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದರೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಭಾಷಣ ಕೇಳಲು ಸಾವಿರಾರು ಮಂದಿ ಕಿಕ್ಕಿರಿದು ತುಂಬಿದ್ದರು. ಅಷ್ಟೇ ಅಲ್ಲದೆ ಗಾಂಧಿ ಕುಟುಂಬದ ವಿರುದ್ಧ ಮೋದಿ ಅವರು ವಾಗ್ದಾಳಿ ನಡೆಸುತ್ತಿದ್ದಂತೆಯೇ ನೆರೆದಿದ್ದ ಜನ ಚಪ್ಪಾಳೆ ತಟ್ಟಿ, ಘೋಷಣೆಗಳನ್ನು ಕೂಗುತ್ತಿದ್ದರು. ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದ್ದು, ಅವರ ಅಮೇಥಿ ಕ್ಷೇತ್ರದಲ್ಲಿಯೇ ನರೇಂದ್ರ ಮೋದಿ ರ್ಯಾಲಿ ಕೈಗೊಂಡಿರುವುದು ಕಾಂಗ್ರೆಸ್ ಪಕ್ಷದ ಮಟ್ಟಿಗಂತೂ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


